ತುಮಕೂರು : ಡಾ. ಬಾಬು ಜಗಜೀವನ್ ರಾಮ್‍ರವರು ಸಂವಿಧಾನ ನೀಡಿದ ಮೀಸಲಾತಿಗಳನ್ನು ಸಾಕಾರ ಗೊಳಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವಿಂದು ಸಾಗಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಹೇಳಿದರು.
ಅವರು ಜಿಲ್ಲಾಡಳಿತ, ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಂರ್ಕೀಣದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ 36ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನ್ ರಾಮ್‍ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತ್ತಿದ್ದರು.
ದೇಶದಲ್ಲಿನ ದಮನಿತರ ಅಭ್ಯುದಯಕ್ಕಾಗಿ ಶ್ರಮಿಸಿದ ಅವರು ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದರು, ಕೇಂದ್ರ ಸರ್ಕಾರದಲ್ಲಿ ಪ್ರಥಮ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಅವರು ಪ್ರಥಮ ಉಪ ಪ್ರಧಾನಿಯಾಗಿ ದೇಶಕ್ಕೆ ಸಲ್ಲಿಸಿದ ಸೇವೆ ಅಪಾರ ಎಂದು ಅಪರ ಜಿಲ್ಲಾಧಿಕಾರಿಯವರು ಸ್ಮರಿಸಿದರು.
ಶೋಷಿತ ವರ್ಗದವರ ಕಲ್ಯಾಣಕ್ಕಾಗಿ ಜೀವನವನ್ನು ಮುಡುಪಿಟ್ಟ ಡಾ. ಬಾಬು ಜಗಜೀವನ್ ರಾಮ್ ಅವರ ಜೀವನ ಅನುಕರಣೀಯ, ದೀನದಲಿತರ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅಧಿಕಾರಿಗಳು ನಿಷ್ಠೆಯಿಂದ ಅನುಷ್ಠಾನ ಮಾಡಬೇಕು ಎಂದು ಅವರು ಹೇಳಿದರು.
ಈ ಸಂಧರ್ಭದಲ್ಲಿ ವಿವಿಧ ಸಂಸ್ಥೆಗಳ ಮುಖಂಡರು ಅವರು ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.