ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ

ತುಮಕೂರು : ನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 29 ಹಾಗೂ 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸಮ್ಮೇಳನಾಧ್ಯಕ್ಷರನ್ನಾಗಿ ಲೇಖಕ ಡಾ: ಕರೀಗೌಡ ಬೀಚನಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಂಡು ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಲು ನಿರ್ದೇಶಿಸಿದರು.

ಸಮ್ಮೇಳನ ಅಂಗವಾಗಿ ಡಿಸೆಂಬರ್ 29ರ ಬೆಳಿಗ್ಗೆ 8 ಗಂಟೆಗೆ ನಗರದ ಮಹಾನಗರ ಪಾಲಿಕೆ ಮುಂಭಾಗದಿಂದ ಎಂ.ಜಿ.ರಸ್ತೆ, ಗುಂಚಿ ಚೌಕ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಾರ್ಗವಾಗಿ ಗಾಜಿನ ಮನೆಯವರೆಗೂ ವಿವಿಧ ಕಲಾ ತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ಡಾ: ಕರೀಗೌಡ ಬೀಚನಹಳ್ಳಿ ಅವರು ಡಿಸೆಂಬರ್ 29ರ ಬೆಳಿಗ್ಗೆ 10 ಗಂಟೆಗೆ ಗಾಜಿನ ಮನೆಯಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು, ಸಂಸದರು, ಶಾಸಕರು, ಲೇಖಕರು, ಕಲಾವಿದರು, ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಾರ್ವಜನಿಕರು ಭಾಗವಹಿಸುವರು ಎಂದರು.

ನಗರದಲ್ಲಿ ನಾಲ್ಕು ದಿಕ್ಕಿನಲ್ಲಿ ಬರುವ ವೃತ್ತದ ಪ್ರಮುಖ ಸ್ಥಳಗಳಲ್ಲಿ ಕನ್ನಡದ ಬಾವುಟ, ಬ್ಯಾನರ್, ತಳಿರು-ತೋರಣಗಳಿಂದ ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಬೇಕು. ಸಮ್ಮೇಳನ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಸಮ್ಮೇಳನ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸಲು, ಮಹಾನಗರ ಪಾಲಿಕೆಯ ಕಸ ವಿಲೇವಾರಿ ವಾಹನಗಳಲ್ಲಿ ಧ್ವನಿಮುದ್ರಿಕೆಗಳನ್ನು ಪ್ರಸಾರ ಮಾಡಲು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಸುಗಮ ಸಂಗೀತ, ನೃತ್ಯ ಕಾರ್ಯಕ್ರಮ, ರಂಗಗೀತೆಗಳ ಗಾಯನ, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ, ಹರಿಕಥೆ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪುರುಷೋತ್ತಮ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಈಶ್ವರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *