ತುಮಕೂರು : ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವುದರಿಂದ ನಗರದಲ್ಲಿ ವಿವಿಧ ಇಲಾಖೆಗಳಡಿ ಕಾರ್ಯ ನಿರ್ವಹಿಸುತ್ತಿರುವ 58 ವಿದ್ಯಾರ್ಥಿ ನಿಲಯಗಳ ಜೊತೆಗೆ ಹೆಚ್ಚುವರಿಯಾಗಿ 6 ಹೊಸ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.

ನಗರದ ಹೊರವಲಯ ಮೈದಾಳ ರಸ್ತೆಯಲ್ಲಿರುವ ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋತ್ತರ ಮಹಿಳೆಯರ ವಿದ್ಯಾರ್ಥಿ ನಿಲಯಕ್ಕೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಹೆಚ್ಚುವರಿಯಾಗಿ ಮಂಜೂರಾಗಿರುವ 6 ವಿದ್ಯಾರ್ಥಿ ನಿಲಯಗಳನ್ನು ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿದ್ದು, ಶೀಘ್ರವೇ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಇಂಜಿನಿಯರಿಂಗ್, ವಿಶ್ವವಿದ್ಯಾನಿಲಯ, ಮತ್ತಿತರ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಈ ನಿಲಯದಲ್ಲಿದ್ದು, ಸಮಾಜದಲ್ಲಿ ಉತ್ತಮ ಹಾಗೂ ಆರೋಗ್ಯವಂತ ಪ್ರಜೆಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ, ನಿಗಧಿಪಡಿಸಿರುವ ಆಹಾರ ಪಟ್ಟಿಯನ್ವಯ ವಾರಕ್ಕೆ 4 ದಿನ ಮೊಟ್ಟೆ, ಬಾಳೆಹಣ್ಣು ಹಾಗೂ ವಾರಕ್ಕೊಮ್ಮೆ ಮಾಂಸಹಾರ ಒದಗಿಸಲಾಗುತ್ತಿದೆಯಲ್ಲದೆ, ಪ್ರತಿ ವಿದ್ಯಾರ್ಥಿಗೆ ತಿಂಗಳಿಗೊಮ್ಮೆ ಸೋಪು, ಕೊಬ್ಬರಿಎಣ್ಣೆ, ಮತ್ತಿತರ ದಿನಬಳಕೆ ವಸ್ತುಗಳುಳ್ಳ ಕಿಟ್ ಅನ್ನು ನೀಡಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುವಾಗುವಂತೆ ಪರೀಕ್ಷಾ ಪೂರ್ವ ಸಿದ್ಧತೆಗಾಗಿ ಪೂರಕ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಮೂಲಕ ಮಾದರಿ ವಿದ್ಯಾರ್ಥಿ ನಿಲಯವನ್ನಾಗಿ ರೂಪಿಸಿ ನಿರ್ವಹಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 262 ವಸತಿ ನಿಲಯ :-
ಬೆಳಗಾವಿ, ಕಲ್ಬುರ್ಗಿ ಹೊರತುಪಡಿಸಿ ಅತಿ ಹೆಚ್ಚು ವಸತಿ ನಿಲಯಗಳನ್ನು ಹೊಂದಿರುವ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 104, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 121, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ 16, ಅಲ್ಪಸಂಖ್ಯಾತ ವರ್ಗಗಳ ಕಲ್ಯಾಣ ಇಲಾಖೆಯ 21 ಸೇರಿದಂತೆ ಒಟ್ಟು 262 ವಸತಿ ನಿಲಯಗಳು ಕಾರ್ಯನಿರ್ವಹಿಸುತ್ತಿವೆ. ವಸತಿ ನಿಲಯಗಳಿಗೆ ಸರ್ಕಾರದಿಂದ ಮಂಜೂರಾದ ವಿದ್ಯಾರ್ಥಿಗಳ ಸಂಖ್ಯೆಗಿಂತ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ಸಮಾಜ ಕಲ್ಯಾಣ ಇಲಾಖೆಯಡಿ 7 ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 6 ಹೊಸ ವಸತಿ ನಿಲಯಗಳನ್ನು ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದ್ದು, ನಿರ್ಮಾಣ ಕಾಮಗಾರಿಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಪ್ರಸಕ್ತ ವರ್ಷ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ವಸತಿ ನಿಲಯ ನಿರ್ಮಾಣ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿದ್ದು, ಶೀಘ್ರದಲ್ಲಿಯೇ ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಸತಿ ನಿಲಯಗಳಿಗೆ ಸರ್ಕಾರವು 25,455 ವಿದ್ಯಾರ್ಥಿಗಳಿಗೆ ಮಂಜೂರಾತಿ ನೀಡಿದ್ದು, ಈ ಪೈಕಿ 25,450 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ವಸತಿ ನಿಲಯಗಳಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಶ್ರಮಿಸುತ್ತಿದೆ. ಜಿಲ್ಲೆಯಲ್ಲಿರುವ ಎಲ್ಲಾ ವಸತಿ ನಿಲಯಗಳ ಸಮರ್ಪಕ ನಿರ್ವಹಣೆಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಸಚಿವರಿಂದ ವಸತಿ ನಿಲಯ ಪರಿಶೀಲನೆ :-

ಇದಕ್ಕೂ ಮುನ್ನ ಸಚಿವರು ವಸತಿ ನಿಲಯದ ವಿದ್ಯಾರ್ಥಿಗಳ ಕೊಠಡಿ, ಅಡುಗೆ ಕೋಣೆ, ದಾಸ್ತಾನು ಕೋಣೆ, ಊಟದ ಕೋಣೆ, ಗ್ರಂಥಾಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ವಸತಿ ನಿಲಯದಲ್ಲಿ ಶುಚಿತ್ವ ಕಾಪಾಡಿಕೊಂಡ ಸಿಬ್ಬಂದಿಯ ಕಾರ್ಯವೈಖರಿಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ವಸತಿ ನಿಲಯದ ವಿದ್ಯಾರ್ಥಿಗಳ ಸಾಮಥ್ರ್ಯ, ನಿಲಯಕ್ಕೆ ಪ್ರಸಕ್ತ ವರ್ಷ ದಾಖಲಾದ ವಿದ್ಯಾರ್ಥಿಗಳು ಹಾಗೂ ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ನಿಲಯ ಮೇಲ್ವಿಚಾರಕಿ ಅರ್ಪಿತ ಅವರಿಂದ ಪಡೆದು ಕೊಂಡರು.
ವಿದ್ಯಾರ್ಥಿಗಳಿಗಾಗಿ ತಯಾರಿಸಿಟ್ಟಿದ್ದ ಆಹಾರವನ್ನು ಸಚಿವರು ಪರಿಶೀಲಿಸಿದರು. ಅಡುಗೆ ಸಿಬ್ಬಂದಿಯ ವೇತನದ ಬಗ್ಗೆ ಮಾಹಿತಿ ಪಡೆದ ಅವರು ಮೆನು ಚಾರ್ಟ್‍ನಲ್ಲಿರುವಂತೆ ಪ್ರತಿ ದಿನ ಕಡ್ಡಾಯವಾಗಿ ಶುಚಿ ಹಾಗೂ ರುಚಿಯಾದ ಆಹಾರ ತಯಾರಿಸಿ ವಿದ್ಯಾರ್ಥಿಗಳಿಗೆ ನೀಡಬೇಕೆಂದು ಅಡುಗೆ ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಬ್ಬೀರ್ ಅಹಮ್ಮದ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ರಂಗಸ್ವಾಮಿ, ಮತ್ತಿತರ ಅಧಿಕಾರಿ/ಸಿಬ್ಬಂದಿ ಉಪಸ್ಥಿತರಿದ್ದರು.