ರಾಗಿ ಕಟಾವು ಯಂತ್ರಕ್ಕೆ 2700 ರೂ. ಬಾಡಿಗೆ ದರ ನಿಗಧಿ : ಶುಭ ಕಲ್ಯಾಣ್

ತುಮಕೂರು : ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ರಾಗಿ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ 2700 ರೂ. ಮೀರದಂತೆ ಬಾಡಿಗೆಯನ್ನು ನಿಗಧಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಬೆಳೆ ಕಟಾವು ಯಂತ್ರ ಬೆಲೆ ನಿಗಧಿ ಪೂರ್ವ ಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರಾಗಿ ಬೆಳೆ ಕಟಾವಿಗಾಗಿ ಹೆಚ್ಚು ಬಾಡಿಗೆ ದರ ತೆಗೆದುಕೊಳ್ಳುವ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆ 1.67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ವಿವಿಧ ಭಾಗಗಳಲ್ಲಿ ರಾಗಿ ಬೆಳೆ ಕಟಾವು ಪ್ರಾರಂಭಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಕಟಾವು ಯಂತ್ರಗಳನ್ನು ತರುವ ಮಾಲೀಕರು ಬೆಳೆ ಕಟಾವಿಗೆ ಹೆಚ್ಚಿನ ಮೊತ್ತ ನಿಗಧಿ ಮಾಡಿರುವ ಬಗ್ಗೆ ರೈತರಿಂದ ದೂರು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಮತ್ತು ರೈತ ಮುಖಂಡರೊಂದಿಗೆ ಚರ್ಚಿಸಿ ರೈತರಿಗೆ ಆರ್ಥಿಕ ಹೊರೆ ಹೆಚ್ಚಾಗದಂತೆ ಬೆಳೆ ಕಟಾವಿಗೆ ನಿರ್ಧಿಷ್ಟ ಬೆಲೆಯನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು.

ಕೃಷಿ ವಿಜ್ಞಾನ ಕೇಂದ್ರದಿಂದ ಬೆಳೆ ಕಟಾವು ಯಂತ್ರಗಳ ಕಾರ್ಯಕ್ಷಮತೆ ಪರಿಶೀಲನೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗುವುದು. ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಆಯಾ ತಹಶೀಲ್ದಾರ್, ಪೆÇಲೀಸ್ ಇಲಾಖೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳನ್ನೊಳಗೊಂಡಂತೆ ಸಭೆ ನಡೆಸಿ ತಮ್ಮ ವ್ಯಾಪ್ತಿಯಲ್ಲಿರುವ ಕಟಾವು ಯಂತ್ರಗಳ ಮಾಹಿತಿ ಪಡೆದು ಯಂತ್ರಗಳ ಕಾರ್ಯಕ್ಷಮತೆಯನ್ನು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಜಿಲ್ಲಾಡಳಿತದಿಂದ ಬೆಳೆ ಕಟಾವು ಯಂತ್ರಗಳಿಗೆ ದರ ನಿಗಧಿಪಡಿಸಿರುವ ಬಗ್ಗೆ ಕರಪತ್ರಗಳ ಮೂಲಕ ಹೆಚ್ಚು ಪ್ರಚಾರ ಕೈಗೊಳ್ಳಬೇಕು. ಜಿಲ್ಲೆಯ ರೈತರ ಅನುಕೂಲಕ್ಕಾಗಿ ಕೃಷಿ ಇಲಾಖೆ ವತಿಯಿಂದ ಸಹಾಯವಾಣಿ ಸ್ಥಾಪಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಲೋಗಾನಂದ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಂಗಸ್ವಾಮಿ, ಕೃಷಿ ಸಹಾಯಕ ನಿರ್ದೇಶಕರಾದ ಹುಲಿರಾಜ್ ಹಾಗೂ ಚಂದ್ರಕುಮಾರ್ ಸೇರಿದಂತೆ ವಿವಿಧ ರೈತ ಮುಖಂಡರು ಹಾಜರಿದ್ದರು.

Leave a Reply

Your email address will not be published. Required fields are marked *