ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರ ಮನವೊಲಿಸಲು ಡೀಸಿ ನಿರ್ದೇಶನ

ತುಮಕೂರು : ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಲು ಜಿಲ್ಲೆಯ ರೈತರ ಮನವೊಲಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಬುಧವಾರ ಸಂಜೆ ರೈತರಿಗೆ ಸೌಲಭ್ಯಗಳ ಒದಗಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವ ಬಗ್ಗೆ ಸಭೆ ನಡೆಸಿ ಮಾತನಾಡಿದ ಅವರು ರೈತರು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಲ್ಲಿ ಆರ್ಥಿಕವಾಗಿ ಸದೃಢರಾಗಬಹುದು. ಇದರಿಂದ ರೈತರಲ್ಲಿ ಮನೋಸ್ಥೈರ್ಯ ಹೆಚ್ಚುತ್ತದೆ.  ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಬಹುದು. ಈ ನಿಟ್ಟಿನಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಲು ರೈತರನ್ನು ಪ್ರೇರೇಪಿಸಬೇಕೆಂದು ಅವರು ಸೂಚನೆ ನೀಡಿದರು. 


ಜಿಲ್ಲೆಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿರುವ ರೈತರ ಪಟ್ಟಿಯನ್ನು ತಯಾರಿಸಬೇಕು. ಈಗಾಗಲೇ ಈ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿರುವ ರೈತರಿಗೆ ಕೃಷಿ, ತೋಟಗಾರಿಕೆ, ರೇಷ್ಮೆ, ವಿವಿಧ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳ ಮಾಹಿತಿಯನ್ನು ಅಧಿಕಾರಿ/ಸಿಬ್ಬಂದಿ ನೀಡಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ ತಾಲ್ಲೂಕುವಾರು ಸಾಲ ಪಡೆದ ರೈತರ ಪಟ್ಟಿ ನೀಡಬೇಕೆಂದು ಸಹಕಾರ ಇಲಾಖೆ ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು. 

ಜಂಟಿ ಕೃಷಿ ನಿರ್ದೇಶಕ ರಮೇಶ್ ಮಾತನಾಡಿ, ರೈತರಿಗೆ ಹೋಬಳಿ ಮಟ್ಟದಲ್ಲಿ ಕೃಷಿ ಹಾಗೂ ಕೃಷಿ ಸಂಬಂಧಿತ ಯೋಜನೆಗಳ ಮಾಹಿತಿ ನೀಡಲು ದಿನಾಂಕವನ್ನು ನಿಗಧಿಪಡಿಸಿ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡಕ್ಕೆ ಸೂಚನೆ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಚೈತನ್ಯ ಕಂಚಿಬೈಲ್, ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಲೋಗಾನಂದನ್, ಸೇರಿದಂತೆ ಕೃಷಿ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು, ಮತ್ತಿತರರು ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *