ತುಮಕೂರು- ಮಹಾನಗರ ಪಾಲಿಕೆಯ ನೌಕರರಿಗೂ ಏಳನೇ ವೇತನ ಆಯೋಗದ ಸೌಲಭ್ಯಗಳನ್ನು ವಿಸ್ತರಿಸಬೇಕು, ಅನುದಾನವನ್ನು ಆರ್ಥಿಕ ಇಲಾಖೆಯಿಂದಲೇ ಬಿಡುಗಡೆ ಮಾಡಬೇಕು, ನಿಯಮದಂತೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿ ತರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರು ತಮ್ಮ ಕಾರ್ಯಗಳನ್ನು ಸ್ಥಗಿತಗೊಳಿಸಿ ನಗರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಅನಿರ್ಧಿಷ್ಠಾವಧಿ ಮುಷ್ಕರ ನಡೆಸುತ್ತಿದ್ದಾರೆ.
ಮುಷ್ಕರ ನಡೆಸುತ್ತಿರುವ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ತನ್ನ ನೌಕರರಿಗೆ ಜಾರಿಗೆ ತಂದಿರುವ ಆರೋಗ್ಯ ಸಂಜಿವಿನಿ ಯೋಜನೆಯನ್ನು ಮಹಾನಗರ ಪಾಲಿಕೆ ನೌಕರರಿಗೂ ವಿಸ್ತರಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಜನರೊಂದಿಗೆ ಬೆರೆತು ಕೆಲಸ ಮಾಡುವ ಪಾಲಿಕೆಯ ಆರೋಗ್ಯ ಅಧಿಕಾರಿಗಳು, ನಿರೀಕ್ಷಕರು, ಕಂದಾಯ ಅಧಿಕಾರಿಗಳು, ಪೌರ ಕಾರ್ಮಿಕರುಗಳಿಗೆ ಆರೋಗ್ಯ ಸಂಜೀವಿನಿ ಯೋಜನೆ ಅತಿ ಅಗತ್ಯವಾಗಿದೆ. ಈಗಿರುವ ಮರು ಪಾವತಿ ಯೋಜನೆಯಲ್ಲಿ ಖರ್ಚು ಮಾಡಿದರೆ ಶೇ. 35 ರಷ್ಟು ಮಾತ್ರ ವಾಪಸ್ ಬರುತ್ತದೆ. ಸಣ್ಣ ಪುಟ್ಟ ಹುದ್ದೆಯಲ್ಲಿ ಕೆಲಸ ಮಾಡುವ ನೌಕರರಿಗೆ ಇದರಿಂದ ಬಹಳ ತೊಂದರೆಯಾಗಲಿದೆ. ಹಾಗಾಗಿ ನಮಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ತುರ್ತಾಗಿ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಜು. 8 ರಿಂದ ಅನಿರ್ಧಿಷ್ಠಾವಧಿ ಮುಷ್ಕರವನ್ನು ಕೈಗೊಂಡಿದ್ದು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾಂಕೇತಿಕವಾಗಿ ಮುಷ್ಕರ ನಡೆಸಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದೇವೆ. ಇದರ ಮುಂದುವರಿದ ಭಾಗವಾಗಿ ನಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿ ಪಾಲಿಕೆಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದೇವೆ ಎಂದು ಹೇಳಿದರು.
ಮಹಾನಗರ ಪಾಲಿಕೆಯ ನೌಕರರು ಕಚೇರಿಯ ಹೊರ ಭಾಗದಲ್ಲಿ ಬೇಡಿಕೆ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿದ್ದರೆ, ಪಾಲಿಕೆಯ ಆಯುಕ್ತೆ ಬಿ.ವಿ. ಅಶ್ವಿಜ ರವರು ಒಬ್ಬರೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದದ್ದು ಕಂಡು ಬಂತು.
ಮಹಾನಗರ ಪಾಲಿಕೆ ನೌಕರರ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಜ್ಯೋತಿಗಣೇಶ್ ಅವರು ನೌಕರರ ಅಹವಾಲುಗಳನ್ನು ಆಲಿಸಿದರು.
ನಂತರ ಮಾತನಾಡಿದ ಶಾಸಕರು ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರು ನಿನ್ನೆಯಿಂದ ಮುಷ್ಕರ ನಡೆಸುತ್ತಿದ್ದಾರೆ. ಇಂದು ಮುಂದುವರಿದ ಭಾಗವಾಗಿ ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಬೇಡಿಕೆಗಳ ಆಲಿಸಿ, ಈಡೇರಿಸಲು ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಮುಷ್ಕರದಲ್ಲಿ ಮಹಾನಗರ ಪಾಲಿಕೆಯ ನೌಕರರ ಸಂಘದ ಪದಾಧಿಕಾರಿಗಳಾದ ಶಬ್ಬೀರ್ ಅಹಮದ್, ಪುಷ್ಪಲತಾ, ಸಿದ್ದಲಿಂಗಪ್ಪ, ಮಧು, ವಿಶ್ವನಾಥ್, ಶೇಖರಬಾಬು, ಮಹೇಶ್ ಸೇರಿದಂತೆ ಪಾಲಿಕೆಯ ನೌಕರರುಗಳು ಪಾಲ್ಗೊಂಡಿದ್ದರು.