ತುಮಕೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಚುನಾವಣೆಯನ್ನು ನಗರದ ಪತ್ರಿಕಾ ಭವನದಲ್ಲಿ ನವೆಂಬರ್ 9ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಸಿ. ಕಾಂತರಾಜು ಅವರು ತಿಳಿಸಿದ್ದಾರೆ.
ಗುರುವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ಹಾಗೂ ನಿಯಮಾನುಸಾರವಾಗಿ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಘಟಕ ತುಮಕೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣಾ ಪ್ರಕ್ರಿಯೆಯು ಅಕ್ಟೋಬರ್ 13ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸುವುದರಿಂದ ಆರಂಭಗೊಂಡಿದ್ದು, ಅಕ್ಟೋಬರ್ 17ರವರೆಗೆ ಆಕ್ಷೇಪಣೆಗಳನ್ನು ಸ್ವೀಕರಿಸಲಾಯಿತು. ಬಳಿಕ ರಾಜ್ಯ ಚುನಾವಣಾಧಿಕಾರಿಗಳ ಮಾರ್ಗಸೂಚಿಯನ್ವಯ ಅಕ್ಟೋಬರ್ 18ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಹೇಳಿದರು.
ಅಕ್ಟೋಬರ್ 19 ರಿಂದ 27ರವರೆಗೆ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಅಕ್ಟೋಬರ್ 30ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದ್ದು, ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಘಟಕದಲ್ಲಿ ಒಟ್ಟು 388 ಮತದಾರರು ಇದ್ದು, ಇವರಲ್ಲಿ 14 ಸಹ ಸದಸ್ಯರು ಮತದಾನ ಅಥವಾ ಸ್ಪರ್ಧೆಯಲ್ಲಿ ಭಾಗವಹಿಸಲು ನಿಯಮದನ್ವಯ ಅವಕಾಶವಿಲ್ಲ. ಹೀಗಾಗಿ 374 ಮಂದಿ ಮತದಾರರು (ನಿಧನರಾದವರನ್ನು ಹೊರತುಪಡಿಸಿ) ಮತ ಚಲಾಯಿಸಲು ಅವಕಾಶ ಹೊಂದಿದ್ದಾರೆ ಎಂದು ತಿಳಿಸಿದರು.
ಮತದಾನ ಪ್ರಕ್ರಿಯೆಗಾಗಿ ಪತ್ರಿಕಾ ಭವನದಲ್ಲಿ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತದಾನ ಸಮಯದಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಮತದಾರರು ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಿ ಚುನಾವಣಾ ಪ್ರಕ್ರಿಯೆ ಸುಗಮಗೊಳಿಸಲು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಮತದಾನ ಮುಗಿದ ತಕ್ಷಣ ಮತ ಎಣಿಕೆ ಕಾರ್ಯ ಕೈಗೊಳ್ಳಲಾಗುವುದು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ವಿ.ಗೋವಿಂದರೆಡ್ಡಿ ಹಾಜರಿದ್ದರು.