ತುಮಕೂರು : ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 5ರಂದು ಸಂಜೆ 4 ಗಂಟೆಗೆ ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿರುವ ಡಾ: ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಡೆಯಲಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಅವರು ಹೇಳಿದರು.
ಬುಧವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, 2024ನೇ ಸಾಲಿನ ಗೌರವ ಪ್ರಶಸ್ತಿ, ಸಾಹಿತ್ಯಶ್ರೀ ಪ್ರಶಸ್ತಿ ಹಾಗೂ 2023ನೇ ಸಾಲಿನ ಪುಸ್ತಕ ಬಹುಮಾನ ಮತ್ತು ದತ್ತಿ ಬಹುಮಾನ ಪ್ರದಾನ ನಡೆಯಲಿದೆ. ಡಾ: ಎಂ. ಬಸವಣ್ಣ, ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್, ಡಾ: ಡಿ.ಬಿ. ನಾಯಕ ಹಾಗೂ ಡಾ: ವಿಶ್ವನಾಥ್ ಕಾರ್ನಾಡ್ ಸೇರಿದಂತೆ 41 ಜನರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು.
ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವ ಶಿವರಾಜ್ ಎಸ್.ತಂಗಡಗಿ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಡಾ: ಲಕ್ಷ್ಮಣ್ ದಾಸ್ ಉಪಸ್ಥಿತರಿದ್ದರು.