ತುಮಕೂರು : ಲಿಂಗ ಸಮತೋಲನವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ; ಈ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆತಂತ್ರ ವಿಧಾನಗಳ ನಿಷೇಧ ಕಾಯಿದೆ (PCPNDT) ಕುರಿತು ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಣ್ಣುಶಿಶುವಿನ ಹತ್ಯೆ ಸಮಾಜಕ್ಕೆ ಕಳಂಕವಾಗಿದ್ದು, ಭ್ರೂಣಲಿಂಗ ಪತ್ತೆ ಮತ್ತು ಲಿಂಗಾಧಾರಿತ ಗರ್ಭಪಾತವನ್ನು ತಡೆಯುವಲ್ಲಿ PCPNDT ಕಾಯಿದೆ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು. ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ಖಾಸಗಿ ಆಸ್ಪತ್ರೆಗಳು ಕಾಯಿದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದರು.
ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ತಪಾಸಣೆಗಳು, ನೋಂದಾಯಿತ ಸ್ಕ್ಯಾನಿಂಗ್ ಕೇಂದ್ರಗಳ ಸ್ಥಿತಿ, ದಾಖಲೆ ನಿರ್ವಹಣೆ, ಹಾಗೂ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಕೈಗೊಳ್ಳಲಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಯಾವುದೇ ರೀತಿಯ ಅಕ್ರಮ ಭ್ರೂಣಲಿಂಗ ಪತ್ತೆ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ನಿರಂತರ ನಿಗಾವಹಿಸುವ ಅಗತ್ಯವಿದೆ ಎಂದು ಹೇಳಿದರು.
ಗರ್ಭಿಣಿಯರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಕಾರ್ಯಕರ್ತರ ಮೂಲಕ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಆಶಾ, ಅಂಗನವಾಡಿ ಕಾರ್ಯಕರ್ತರು ಮತ್ತು ಆರೋಗ್ಯ ಸಿಬ್ಬಂದಿ ಜನರಲ್ಲಿ ಕಾಯಿದೆಯ ಮಹತ್ವವನ್ನು ತಿಳಿಸಿ, ಹೆಣ್ಣುಮಕ್ಕಳ ಸಂರಕ್ಷಣೆಯ ಸಂದೇಶವನ್ನು ಮನೆಮಟ್ಟಕ್ಕೆ ತಲುಪಿಸಬೇಕು ಎಂದು ಸಭೆ ಸೂಚನೆ ನೀಡಿತು.
ಸಭೆಯಲ್ಲಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸದಸ್ಯರು, ವೈದ್ಯಕೀಯ ಪ್ರತಿನಿಧಿಗಳು ಉಪಸ್ಥಿತರಿದ್ದರು.