ಬೆಂಗಳೂರು: “ಗಾಂಧಿಯ ಗ್ರಾಮಸ್ವರಾಜ್ಯ ಮತ್ತು ಅಂಬೇಡ್ಕರರ ಸಾಮಾಜಿಕ ನ್ಯಾಯದ ಉಳಿವಿಗೆ ಆಗ್ರಹಿಸಿ ಬೆಂಗಳೂರು ಚಲೋ” ಕಾರ್ಯಕ್ರಮವನ್ನು ಫೆಬ್ರವರಿ 8, ಗುರುವಾರ ಬೆಳಿಗ್ಗೆ 10.30 ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾಒಕ್ಕೂಟದ ರಾಜ್ಯಾಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ರವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದಾರೆ ಎಂದು ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾಒಕ್ಕೂಟ ತಿಳಿಸಿದೆ.
ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಭಾರತದ ಸಂವಿಧಾನದ ಪ್ರಕರಣ 243ಜಿ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ಅಧಿನಿಯಮ 1993ರ ಪ್ರಕರಣ 58(4)ರ ಅನ್ವಯ ಗ್ರಾಮ ಪಂಚಾಯಿತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿವೆ ಎಂದು ತಿಳಿಸಿದ್ದಾರೆ.
ಆದರೆ, ಮೇಲಿನ ಹಂತದ ಅಧಿಕಾರಿಗಳು ಹಾಗು ಜನಪ್ರತಿನಿಧಿಗಳು ನೇರವಾಗಿ ಗ್ರಾಮ ಪಂಚಾಯಿತಿಗಳ ಆಡಳಿತದಲ್ಲಿ, ನಿರ್ಣಯಗಳಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಗ್ರಾಮ ಪಂಚಾಯಿತಿಗಳನ್ನು ತಮ್ಮ ಕೈಕೆಳಗೆ ಕಾರ್ಯನಿರ್ವಹಿಸುವ ಶಾಖಾ ಕಛೇರಿಗಳನ್ನಾಗಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಂವಿಧಾನ ಬದ್ಧ ಸಂಸ್ಥೆಗಳಾದ ಗ್ರಾಮ ಪಂಚಾಯಿತಿಗಳಿಗೆ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಕೇವಲ ಮೂಕ ಪ್ರೇಕ್ಷಕರಾಗಿದ್ದಾರೆ, “ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ ಭಾರತದ ಕಟ್ಟಕಡೆಯ ವ್ಯಕಿಯನ್ನು ಪ್ರಭುವನ್ನಾಗಿಸಬೇಕೆಂಬ” ಗಾಂಧೀಜಿಯವರ ಆಶಯ ಮಣ್ಣು ಪಾಲಾಗಿದೆ ಎಂದು ತಿಳಿಸಿದ್ದಾರೆ.
ಪಂಚಾಯತ್ ರಾಜ್ ವ್ಯವಸ್ಥೆಯ ಕಾರಣದಿಂದಾಗಿ ಎಲ್ಲ ವರ್ಗದ ಜನರಿಗೆ ಹಾಗೂ ಮಹಿಳೆಯರಿಗೆ ರಾಜಕೀಯ ಅಧಿಕಾರ ದೊರಕಿದೆ. ದೇಶದ ಅಭಿವೃದ್ಧಿಯಲ್ಲಿ ಎಲ್ಲರೂ ಭಾಗೀದಾರರಾಗಬೇಕೆನ್ನುವ ಬಾಬಾ ಸಾಹೇಬ್ ಅಂಬೇಡ್ಕರರ ಕನಸು ನನಸಾಗಿದೆ. ಆದರೆ, ಮೇಲಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನೇರವಾಗಿ ಪಂಚಾಯಿತಿಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದರಿಂದ ಮೀಸಲಾತಿಯ ಉದ್ದೇಶ ಸಂಪೂರ್ಣ ವಿಫಲವಾಗಿದೆ. ಅಧಿಕಾರವಿದ್ದರೂ ಚಲಾಯಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ಸ್ವತಂತ್ರ್ಯ ಸರ್ಕಾರಗಳಾಗಿ ಕಾರ್ಯನಿರ್ವಹಿಸಬೇಕಿದ್ದ ಗ್ರಾಮ ಪಂಚಾಯಿತಿಗಳು ತಮ್ಮ ಸ್ವತಂತ್ರ್ಯವನ್ನು ಕಳೆದುಕೊಂಡಿವೆ. ಸಂವಿಧಾನದ ಮತ್ತು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಯ ಆಶಯದಂತೆ ಗ್ರಾಮ ಪಂಚಾಯಿತಿಗಳು ಕಾರ್ಯನಿರ್ವಹಿಸುವಂತಾಗಲು, ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸ್ವಾಭಿಮಾನಿ ಗ್ರಾಮ ಪಂಚಾಯಿತಿ ಸದಸ್ಯರು ಬೆಂಗಳೂರು ಚಲೋ” ಕಾರ್ಯಕ್ರಮವನ್ನು ಫೆಬ್ರವರಿ 8, ಗುರುವಾರ ಬೆಳಿಗ್ಗೆ 10.30 ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.