ಕ್ರೀಡಾಪಟುಗಳಿಗಾಗಿ ಶುದ್ಧ ಕುಡಿಯುವ ನೀರಿನ ಘಟಕ

ತುಮಕೂರು- ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ರೀಡಾಭ್ಯಾಸದಲ್ಲಿ ತೊಡಗುವ ಕ್ರೀಡಾಪಟುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಜ್ಯೋತಿಗಣೇಶ್ ಉದ್ಘಾಟಿಸಿದರು.

ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ ಸ್ಪೋರ್ಟ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗಿದೆ. ಇದರೊಂದಿಗೆ ಖೋಖೋ ಕೋರ್ಟ್, ಕಬಡ್ಡಿ ಕೋರ್ಟ್, ವಾಲಿಬಾಲ್ ಕೋರ್ಟ್, ಬಾಲ್ ಬ್ಯಾಡ್ಮಿಂಟನ್ ಕೋರ್ಟ್, ಕ್ರಿಕೆಟ್ ಆಡಲು ಸಹ ಮೈದಾನವನ್ನು ಅಭಿವೃದ್ಧಿಪಡಿಸಲಾಗಿದೆ. ಆದರೆ ಕ್ರೀಡಾಭ್ಯಾಸದಲ್ಲಿ ನಿರತರಾಗುವ ಕ್ರೀಡಾಪಟುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಕ್ರೀಡಾಪಟುಗಳ ಮನವಿ ಮೇರೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದ್ದು, ಈ ಘಟಕವನ್ನು ಶಾಸಕರು ಲೋಕಾರ್ಪಣೆಗೊಳಿಸಿದರು.

ಘಟಕ ಉದ್ಘಾಟಿಸಿದ ನಂತರ ಮಾತನಾಡಿದ ಶಾಸಕ ಜ್ಯೋತಿಗಣೇಶ್ ಅವರು, ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ ಸ್ಪೋರ್ಟ್ ಕಾಂಪ್ಸೆಕ್ಸ್ ಮಾಡಲಾಗಿದ್ದು, ಇದಕ್ಕೆ ಪೂರಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗಿತ್ತು. ಈಗ ಈ ಕೆಲಸವನ್ನು ಮಾಡಿದ್ದು, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿಗೆ ಅಗತ್ಯವಾಗಿ ಬೇಕಾಗಿರುವ ಸೌಲಭ್ಯ ಒದಗಿಸಿಕೊಡುವ ಜತೆಗೆ ಮೈದಾನದ ಅಭಿವೃದ್ಧಿಯನ್ನು ಮಾಡಿಕೊಡಲಾಗುವುದು ಎಂದರು.

ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಕಾರ್ಯದರ್ಶಿ ಎ.ಎನ್. ಪ್ರಭಾಕರ್ ಮಾತನಾಡಿ, ಸ್ಪೋರ್ಟ್ ಕಾಂಪ್ಲೆಕ್ಸ್ ಮಾಡಿಕೊಟ್ಟಿದ್ದಾರೆ. ವಿವಿಧ ಕ್ರೀಡೆಗಳಿಗಾಗಿ 5 ಖೋಖೋ ಕೋರ್ಟ್, ಕಬಡ್ಡಿ ಕೋರ್ಟ್ ನಿರ್ಮಾಣ ಮಾಡಲಾಗಿದ್ದು, ಸಂಜೆ ವೇಳೆ ಕ್ರೀಡಾಪಟುಗಳು ಅಭ್ಯಾಸ ಮಾಡುತ್ತಿರುತ್ತಾರೆ. ಈ ಕ್ರೀಡಾಪಟುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ. ಇದೀಗ ಶಾಸಕರ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸುವ ಮೂಲಕ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಿಕೊಟ್ಟಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ರಾಜಕುಮಾರ್, ವೇಣುಗೋಪಾಲಕೃಷ್ಣ, ಸುನೀಲ್ ಪಟೇಲ್, ಗುರುಪ್ರಸಾದ್, ವಿಜಯಕುಮಾರ್, ಪ್ರದೀಪ್‍ಕುಮಾರ್, ವಿನಯ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *