ತುಮಕೂರು : ಡಾ.ಶ್ರೀ ಶಿವಕುಮಾರಸ್ವಾಮಿಗಳ 117ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ಏಪ್ರಿಲ್ 1ರಂದು ಬೆಳಿಗ್ಗೆ 11 ಗಂಟೆಗೆ ಸಿದ್ಧಗಂಗಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಗಂಗಾ ಸಂಸ್ಥೆಗಳ ಆಡಳಿತಾಧಿಕಾರಿ ಟಿ.ಕೆ.ನಂಜುಡಪ್ಪ ತಿಳಿಸಿದರು.
ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಶ್ರೀಗಳ ಜಯಂತಿಯನ್ನು ಆಚರಿಸಲಾಗುತ್ತಿದ್ದು, ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ವಹಿಸಲಿದ್ದು, ಅಧ್ಯಕ್ಷತೆಯನ್ನು ಮೈಸೂರು ಸುತ್ತೂರು ಮಠದ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದು, ಉದ್ಘಾಟನೆಯನ್ನು ಪತಂಜಲಿ ಯೋಗ ಗುರು ರಾಮದೇವ್ ಮಾಡಲಿದ್ದಾರೆ ಎಂದು ತಿಳಿಸಿದರು.
ದಿವ್ಯ ಸಾನಿಧ್ಯವನ್ನು ಮುಂಡರಗಿ ಮಹಾಸಂಸ್ಥಾನದ ಅಧ್ಯಕ್ಷರಾದ ಡಾ.ಶ್ರೀ ಶ್ರೀ ಅನ್ನದಾನೇಶ್ವರ ಮಹಾಸ್ವಾಮಿಗಳು, ಧಾರವಾಡ ಮುರುಘಮಠದ ಅಧ್ಯಕ್ಷರಾದ ಡಾ.ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಗದಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷರಾದ ಶ್ರೀ ಕಲ್ಲಯ್ಯ ಅಜ್ಜನವರು, ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮಿಗಳು ವಹಿಸಲಿದ್ದಾರೆ.
ಜಯಂತಿಯ ಅಂಗವಾಗಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಗೆ ಅನ್ನ ದಾಸೋಹ ಏರ್ಪಡಿಸಿದ್ದು, ಊಟಕ್ಕೆ ಸಿಹಿಬೂಂದಿ, ಖಾರ ಬೂಂದಿ, ಚಿತ್ರನ್ನ, ಮಜ್ಜಿಗೆಯನ್ನು ಬಡಿಲಾಗುವುದು ಎಂದು ಮಠದ ಆಡಳಿತಾಧಿಕಾರಿ ವಿಶ್ವನಾಥ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಠದ ಸಹಾಯಕ ಆಡಳಿತಾಧಿಕಾರಿ ಮಲ್ಲಿಕಾರ್ಜುನಯ್ಯ, ಶಿವಕುಮಾರಯ್ಯ ಉಪಸ್ಥಿತರಿದ್ದರು.