ತುಮಕೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾದ್ಯಂತ ‘ಒಣ ದಿನ’ಗಳೆಂದು ಘೋಷಿಸಿ ಎಲ್ಲಾ ಮದ್ಯದ ವಹಿವಾಟುಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ.
ಈ ನಿಷೇಧಾದೇಶ ಈಗಾಗಲೇ ಜಾರಿಯಲ್ಲಿದ್ದು, ಏಪ್ರಿಲ್ 26ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಜೂನ್ 3ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರ ಮಧ್ಯರಾತ್ರಿ 12 ಗಂಟೆಯವರೆಗೆ ಅನ್ವಯಿಸುತ್ತದೆ.
ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ನಿಷೇಧಾವಧಿಯಲ್ಲಿ ಎಲ್ಲಾ ರೀತಿಯ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ ಸೇರಿದಂತೆ ಮದ್ಯದ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂದು ಅವರು ಸೂಚಿಸಿದ್ದಾರೆ.