ತುಮಕೂರು ವಸಂತನರಸಾಪುರದ ಬಳಿ ಇಂಟಿಗ್ರೇಟೆಡ್ ಟೌನ್‍ಶಿಪ್ ನಿರ್ಮಾಣಕ್ಕೆ ನಗರಾಭಿವೃದ್ಧಿ ಸಚಿವರ ಸೂಚನೆ

ಬೆಂಗಳೂರು : ತುಮಕೂರು ಜಿಲ್ಲೆಯ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ನಗರಾಭಿವೃದ್ಧಿ ಇಲಾಖೆಯ ವತಿಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್. ಸುರೇಶ (ಬೈರತಿ) ಅವರು ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ನಗರಾಭಿವೃದ್ದಿ ಇಲಾಖೆಯ ಅಡಿಯಲ್ಲಿ ಬರುವ ಹತ್ತು ಮಹಾನಗರ ಪಾಲಿಕೆಗಳು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಳೆದ 3 ತಿಂಗಳಿನಿಂದ ಕೈಗೊಂಡಿರುವ ಕಾಮಗಾರಿ ಹಾಗೂ ಯೋಜನೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಮಂಡಿಸಿರುವ ಆಯವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ Integrated Township ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಗಳಿಂದಾಗಿ ಇಲ್ಲಿಯವರೆಗೂ ನೀತಿ ಸಂಹಿತೆ ಜಾರಿಯಲ್ಲಿತ್ತು. ನೀತಿ ಸಂಹಿತೆ ತೆರವಾಗಿರುವುದರಿಂದ Township ನಿರ್ಮಾಣದ ಬಗ್ಗೆ ಗಮನ ಹರಿಸುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳಿಗೆ ಸಚಿವರಾದ ಬೈರತಿ ಸುರೇಶ ಅವರು ಸೂಚಿಸಿದರು.

ಮಹಾನಗರ ಪಾಲಿಕೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಂದು ವೇಳೆ ಹೆಚ್ಚು ಇದ್ದರೆ, ಕಡಿಮೆ ಮಾನವ ಸಂಪನ್ಮೂಲ ಇರುವ ಜಾಗಕ್ಕೆ ನಿಯೋಜನೆ ಮಾಡಲು ಸಾಧ್ಯವೇ ಎನ್ನುವುದನ್ನು ತಿಳಿಸಲು ಮಾನ್ಯ ಸಚಿವರು ಕಾರ್ಯದರ್ಶಿಗಳಿಗೆ ಸೂಚಿಸಿದರು.

ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು ಸೇರಿದಂತೆ ತಾಂತ್ರಿಕ ಸಿಬ್ಬಂದಿಗಳನ್ನು ಎರವಲು ಸೇವೆ ಅಥವಾ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಪೂರ್ಣಗೊಳಸುವಂತೆ ಮಾನ್ಯ ಸಚಿವರು ಸಭೆಯಲ್ಲಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅಮೃತ್ 2.0 ಯೋಜನೆಯಡಿ ರಾಜ್ಯದ ನಗರ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ತಗಲುವ ಹಣದ ವೆಚ್ಚ ಕುರಿತಂತೆ ಕ್ರಿಯಾಯೋಜನೆ ರೂಪಿಸಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಅವರು ಸೂಚಿಸಿದರು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್.ಬಿ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ ಲಕ್ಷ್ಮೀಕಾಂತ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತ ವೆಂಕಟಾಚಲಪತಿ, ನಗರ ಮತ್ತು ಗ್ರಾಮಾಂತರ ಯೋಜನೆ ನಿರ್ದೇಶಕ ತಿಪ್ಪೇಸ್ವಾಮಿ, ಪೌರಾಡಳಿತ ನಿರ್ದೇಶನಲಾಯದ ಜಂಟಿ ನಿರ್ದೇಶಕ ವಿಜಯ ಕುಮಾರ್, ಮುಖ್ಯ ಅಭಿಯಂತರ ಚಂದ್ರಪ್ಪ ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *