ತುಮಕೂರು : ಜಿಲ್ಲೆಯ ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೆ ಕರ್ತವ್ಯ ನಿರ್ಲಕ್ಷತೆ ತೋರಿರುವ ಸ್ಥಳೀಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ನೀರು ಗಂಟಿಯನ್ನು ಅಮಾನತ್ತು ಮಾಡಲಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.
ಅವರಿಂದು ಜಿಲ್ಲೆಯ ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ರೋಗಿಗಳ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗುವವರೆಗೆ ಉತ್ತಮ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿನ್ನೇನಹಳ್ಳಿ ಗ್ರಾಮದ ಜನರು ಕಲುಷಿತ ನೀರು ಕುಡಿದು ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿ ಧೈರ್ಯ ಹೇಳಿದರಲ್ಲದೆ ರೋಗಿಗಳ ಕುಟುಂಬದವರಿಂದಲೂ ಮಾಹಿತಿ ಪಡೆದರು.
, ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ಕಲುಷಿತ ನೀರು ಸೇವಿಸಿ ಸುಮಾರು 100ಕ್ಕೂ ಹೆಚ್ಚು ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ಕಾರಣ ಕೆಲವರು ಮಧುಗಿರಿ, ಕೊರಟಗೆರೆ, ತುಮಕೂರಿನ ಖಾಸಗಿ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ವಿಷಯ ತಿಳಿದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಅಸ್ವಸ್ಥರಾಗಿದ್ದವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲು ಕ್ರಮಕೈಗೊಂಡಿದ್ದಾರೆ ಎಂದು ತಿಳಿಸಿದರು.
ವಾಂತಿ-ಭೇದಿಯಿಂದ ಜಿಲ್ಲಾಸ್ಪತ್ರೆಗೆ ದಾಖಲಾದವರ ಪೈಕಿ 76 ವರ್ಷದ ಚಿಕ್ಕದಾಸಪ್ಪ ಹಾಗೂ 72 ವರ್ಷದ ಪೆದ್ದಣ್ಣ ಎಂಬುವರು ಮೃತಪಟ್ಟಿದ್ದಾರೆ. ಇವರಿಬ್ಬರೂ ವಯೋವೃದ್ಧರಾದ ಕಾರಣ ರೋಗದ ತೀವ್ರತೆಯನ್ನು ತಡೆಯಲಾರದೆ ಮೃತಪಟ್ಟಿರುವ ಸಾಧ್ಯತೆಯಿದೆಯೆಂದು ತಿಳಿಸಿದರು.
ಗ್ರಾಮಕ್ಕೆ ಪೂರೈಕೆ ಮಾಡುವ ಕುಡಿಯುವ ನೀರಿನ ಕೊಳವೆ ಮಾರ್ಗಕ್ಕೆ ಕಲುಷಿತ ನೀರು ಮಿಶ್ರಿತವಾಗಿರುವುದೇ ವಾಂತಿ-ಭೇದಿ ಪ್ರಕರಣಕ್ಕೆ ಕಾರಣವಾಗಿದೆ ಎಂದು ಪರೀಕ್ಷೆಯಿಂದ ದೃಢಪಟ್ಟಿದೆ. ಕುಡಿಯುವ ನೀರು ಸಂಪರ್ಕ ನೀಡುವ ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಸಂದರ್ಭದಲ್ಲಿ ಕೊಳವೆ ಮಾರ್ಗ ಒಡೆದು ಹೋಗಿ ನೀರು ಕಲುಷಿತ ನೀರು ಮಿಶ್ರಿತವಾಗಿರುವ ಸಾಧ್ಯತೆ ಇದೆ. ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಗೆ ದಾಖಲಾದವರು ಗುಣಮುಖ ಹೊಂದುತ್ತಿದ್ದಾರೆ ಎಂದು ತಿಳಿಸಿದರು.
ಕಲುಷಿತ ನೀರಿನಿಂದ ಚಿನ್ನೇನಹಳ್ಳಿ ವಾಂತಿ-ಭೇದಿ ಪ್ರಕರಣಗಳು ಜಿಲ್ಲೆಯಲ್ಲಿ ಮತ್ತೊಮ್ಮೆ ಮರುಕಳಿಸದಂತೆ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿಗಾ ವಹಿಸಬೇಕು. ವಿವಿಧ ಇಲಾಖೆಗಳು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳುವಾಗ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ಸರಬರಾಜು ಮಾಡುವ ಓವರ್ ಹೆಡ್ ಟ್ಯಾಂಕುಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು ಹಾಗೂ ಆರ್.ಓ.ಪ್ಲಾಂಟ್ಗಳ ಕಾರ್ಯನಿರ್ವಹಣೆ ಬಗ್ಗೆ ನಿಗಾವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಜಿಲ್ಲೆಯ ಪ್ರಗತಿಗೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ಜೂನ್ 14ರಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗುವುದು ಈ ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲಾಗುವುದು. ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಸಮರ್ಪಕವಾಗಿ ಅನುಷ್ಟಾನಗೊಂಡಿಲ್ಲವೆಂದು ಸಾರ್ವಜನಿಕ ದೂರುಗಳಿದ್ದು, ಈ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಗುವುದು ಎಂದರು.
ವಾಂತಿ-ಭೇದಿಯಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಸಚಿವರು ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಎಲ್ಲಾ ಇಲಾಖಾಧಿಕಾರಿ, ನೌಕರರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಸೇವೆಯಲ್ಲಿ ನಿರ್ಲಕ್ಷ ತೋರುವ ಹಾಗೂ ಶಿಸ್ತು ಉಲ್ಲಂಘನೆ ಮಾಡುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಶಸ್ತ್ರಚಿಕಿತ್ಸಕ ಅಸ್ಗರ್ಬೇಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.