ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಿಸದಿದ್ದರೆ ಶಿಕ್ಷಕರ ಮೇಲೆ ಕ್ರಮ-ಡಾ.ಜಿ.ಪರಮೇಶ್ವರ

ತುಮಕೂರು : ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಮಾಣವನ್ನು ಹೆಚ್ಚಿಸಬೇಕು. ಶಿಕ್ಷಕರ ನಿರ್ಲಕ್ಷ್ಯದಿಂದ ಶೇ.35ರಷ್ಟು ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳು ಕಷ್ಟ ಪಡುತ್ತಿದ್ದಾರೆ. ಮಕ್ಕಳು ಅನುತ್ತೀರ್ಣರಾಗಲು ಶಿಕ್ಷಕರೇ ಕಾರಣ. ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ವಿಷಯ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2024-25ನೇ ಸಾಲಿನ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮಕ್ಕಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಅರಿತು ಶಿಕ್ಷಕರು ವಿಶೇಷ ತರಗತಿಗಳನ್ನು ನಡೆಸಿ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಮಾಣವನ್ನು ಉತ್ತಮಗೊಳಿಸಬೇಕು ಎಂದು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ತೋಟಗಾರಿಕೆ ಇಲಾಖೆ ಪ್ರಗತಿ ಪರಿಶೀಲಿಸಿದ ಸಚಿವರು ಜಿಲ್ಲೆಯಲ್ಲಿ ತೆಂಗಿನ ಮರಗಳಿಗೆ ರೋಗೊಸ್ ರೋಗ ಹರಡಿರುವುದರಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಇದರಿಂದ ತೆಂಗಿನಲ್ಲಿ ಇಳುವರಿ ಗಣನೀಯವಾಗಿ ಕುಸಿದಿದ್ದು, ಕೊಬ್ಬರಿ ಮತ್ತು ಎಳನೀರಿನ ಬೆಲೆ ದುಬಾರಿಯಾಗಿದೆ. ರೋಗೊಸ್‍ನಿಂದ ನಷ್ಟ ಉಂಟಾದ ರೈತರಿಗೆ ಪರಿಹಾರ ಕಲ್ಪಿಸಲು ತೆಂಗು ಅಭಿವೃದ್ಧಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸೂಚಿಸಿದರು.

ಜಿಲ್ಲೆಯ ಶಿರಾ, ಮಧುಗಿರಿ ಮತ್ತು ಪಾವಗಡ ತಾಲೂಕಿನಂತಹ ಗಡಿ ಪ್ರದೇಶಗಳಲ್ಲಿ ತಾಯಂದಿರ ಮರಣ ಪ್ರಮಾಣ ಹೆಚ್ಚಳ ಕಂಡುಬಂದಿದೆ. ಇದು ರಾಜ್ಯದ ಸರಾಸರಿ ಮಟ್ಟವನ್ನು ಮೀರಿರುವುದರಿಂದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರ ಶೇಖರ್ ಅವರಿಗೆ ಸೂಚನೆ ನೀಡಿದಾಗ ತಾಯಂದಿರ ಮರಣ ಪ್ರಮಾಣವನ್ನು ಕಡಿಮೆಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಶಾಸಕ ಬಿ. ಸುರೇಶ್ ಗೌಡ ಮಾತನಾಡುತ್ತ, ಪೆÇೀಕ್ಸೋ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದರಿಂದ ಕಾಯ್ದೆ ಕುರಿತು ಯುವಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಸುರೇಶ್ ಬಾಬು, ಡಾ|| ಹೆಚ್.ಡಿ. ರಂಗನಾಥ್, ಎಸ್.ಆರ್. ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ ಸೇರಿದಂತೆ ಜಿಲ್ಲಾ ಹಾಗೂ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *