ಕ್ರೀಡಾ ಸಾಧನೆ ಗುರುತಿಸಿ ಒಳಾಂಗಣ ಕ್ರೀಡಾಂಗಣಕ್ಕೆ ನನ್ನ ಹೆಸರನ್ನು ಇಡಲಾಗಿದೆ : ಸಚಿವ ಡಾ: ಜಿ. ಪರಮೇಶ್ವರ

ತುಮಕೂರು : ಒಳಾಂಗಣ ಕ್ರೀಡಾಂಗಣಕ್ಕೆ ನನ್ನ ಹೆಸರನ್ನು ಇಟ್ಟಿರುವುದಕ್ಕೆ ಕೆಲವು ವಿರೋಧಗಳಿದ್ದರೂ, ನಾನು ಒಬ್ಬ ಕ್ರೀಡಾಪಟುವಾಗಿದ್ದು, ಜಿಲ್ಲೆಗೆ ನಾನು ನೀಡಿರುವ ಸಾಧನೆ ಮತ್ತು ಸೇವೆಯನ್ನು ಗುರುತಿಸಿ ಈ ಒಳಾಂಗಣ ಕ್ರೀಡಾಂಗಣಕ್ಕೆ ನನ್ನ ಹೆಸರನ್ನು ಇಡಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಸ್ಪಷ್ಟಪಡಿಸಿದರು.

ಮಂಗಳವಾರ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟದ ಪೂರ್ವೋತ್ಸವ ಹಾಗೂ ಒಳಾಂಗಣ ಕ್ರೀಡಾಂಗಣದ ನಾಮಫಲಕ ಅನಾವರಣ ಹಾಗೂ ನವೀಕೃತ ಕ್ರೀಡಾಂಗಣದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಜನವರಿ 16 ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಒಲಿಂಪಿಕ್ ಕ್ರೀಡಾಕೂಟ ತುಮಕೂರಿನ ಐತಿಹಾಸಿಕ ಕಾರ್ಯಕ್ರಮ ಎಂದು ಹೇಳಿದರು.

ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿರುವುದು ತುಮಕೂರು ಜಿಲ್ಲೆಗೆ ಐತಿಹಾಸಿಕ ಕ್ಷಣವಾಗಿದೆ. ಈ ಹಿಂದೆ ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನಡೆದಿಲ್ಲ, ತುಮಕೂರಿನಲ್ಲಿ ಕ್ರೀಡಾಕೂಟ ಆಯೋಜಿಸಲು ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರನ್ನು ಒಪ್ಪಿಸಿ ಈ ಅವಕಾಶ ಪಡೆದಿದ್ದು, ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಆಗದಂತಹ ಅದ್ದೂರಿ ಕ್ರೀಡಾಕೂಟ ಇದಾಗಲಿದೆ. ಈ ಮೂಲಕ ತುಮಕೂರು ಮತ್ತೊಂದು ಇತಿಹಾಸ ಬರೆಯಲಿದೆ ಎಂದು ಅವರು ಹೇಳಿದರು.

ಕರ್ನಾಟಕ ಕ್ರೀಡಾಕೂಟದಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದು, ಜನವರಿ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಜನವರಿ 22ರಂದು ರಾಜ್ಯಪಾಲರು ಸಮಾರೋಪ ಭಾಷಣ ಮಾಡಲಿದ್ದಾರೆ. ಕ್ರೀಡಾಕೂಟ ವಿಜೃಂಭಣೆಯಿಂದ ನಡೆಸಲು ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

ಪ್ರತಿ ವರ್ಷ 5 ರಿಂದ 10ಸಾವಿರ ಕ್ರೀಡಾಪಟುಗಳು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಏಷ್ಯ ಮಟ್ಟದಲ್ಲಿ 500 ಕ್ರೀಡಾಪಟುಗಳನ್ನು ತಯಾರಿಸಿ ಕ್ರೀಡೆಯಲ್ಲಿ ಸಾಧನೆ ಮಾಡುವ ಗುರಿಯನ್ನು ರಾಜ್ಯ ಒಲಿಂಪಿಕ್ ಸಂಸ್ಥೆ ಹೊಂದಿದೆ. ಈ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯ ಕ್ರೀಡಾಪಟುಗಳಿಗೆ ಹಾಗೂ ಯುವ ಸಮುದಾಯಕ್ಕೆ ಕ್ರೀಡಾಕ್ಷೇತ್ರದಲ್ಲಿ ಹೊಸ ಶಕೆ ಆರಂಭವಾಗಲಿದೆ ಎಂದು ಹೇಳಿದರು.

ತುಮಕೂರು ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಒಂದು ವರ್ಷದೊಳಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಪೂರ್ಣಗೊಳಿಸಿ ಅಂತರ್ ರಾಷ್ಟ್ರೀಯ ಮಟ್ಟದ ಪಂದ್ಯಗಳನ್ನು ನಮ್ಮ ಜಿಲ್ಲೆಯಲ್ಲಿ ರೂಪಿಸುವ ಉದ್ದೇಶವಿದೆ ಎಂದು ಅವರು ಹೇಳಿದರು.

ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಡಾ: ಕೆ. ಗೋವಿಂದರಾಜ್ ಅವರು ಮಾತನಾಡಿ, ಕ್ರೀಡಾಕೂಟದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಕಳೆದ 25 ವರ್ಷಗಳಿಂದ ಗೃಹ ಸಚಿವ ಡಾ: ಜಿ.ಪರಮೇಶ್ವರ ಅವರು ಕ್ರೀಡಾ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅಪಾರವಾಗಿದೆ. ತುಮಕೂರಿನಲ್ಲಿ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಿರುವುದರಿಂದ ಜಿಲ್ಲೆಯ ಕ್ರೀಡಾ ಉತ್ಸಾಹಿಗಳು ಹಾಗೂ ಗ್ರಾಮೀಣ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕ್ರೀಡೆಗೆ ಇನ್ನಷ್ಟು ಪ್ರೋತ್ಸಾಹ ನೀಡಲು ಹಾಗೂ ಕ್ರೀಡಾಪಟುಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, 2026–27ರ ಆಯವ್ಯಯದಲ್ಲಿ ಆ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳು ಮಂಡನೆ ಮಾಡುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *