ಪ.ಜಾ-ಪ.ಪಂ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು – ಜಿಲ್ಲಾಧಿಕಾರಿ

ತುಮಕೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಉಸ್ತುವಾರಿ ಮತ್ತು ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹಕ್ಕುಗಳ ರಕ್ಷಣೆಗೆ ಯಾವುದೇ ರೀತಿಯ ನಿರ್ಲಕ್ಷ್ಯ ತೋರಬಾರದು ಎಂದು ಎಚ್ಚರಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ಪ್ರಕರಣಗಳು ವರದಿಯಾಗುವ ಗ್ರಾಮಗಳಲ್ಲಿ ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಹಾಗೂ ಇತರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿ ಆಯಾ ಹಂತದಲ್ಲೇ ಶಾಂತಿ ಸಭೆಗಳನ್ನು ಆಯೋಜಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕೆಂದರು.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಜಮೀನುಗಳಿಗೆ ಹೋಗುವ ಮಾರ್ಗಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಕುರಿತು ಅನೇಕ ಅರ್ಜಿಗಳು ಬಂದಿರುವುದರಿಂದ, ಎಲ್ಲ ತಾಲೂಕು ತಹಶೀಲ್ದಾರರು ಮತ್ತು ಉಪವಿಭಾಗಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಬಾಕಿ ಉಳಿದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಾತನಾಡಿ, ಗ್ರಾಮ ಮಟ್ಟದಲ್ಲಿ ನಿರ್ಮಾಣವಾಗಿರುವ ಸಮುದಾಯಭವನಗಳನ್ನು ಇನ್ನು ಮುಂದೆ ಗ್ರಾಮ ಪಂಚಾಯತಿಯಿಂದಲೇ ನಿರ್ವಹಿಸಲು ಕ್ರಮ ವಹಿಸಲಾಗುವುದು. ಅಲ್ಲದೆ, ಸಮುದಾಯ ಭವನಗಳನ್ನು ಯಾವ ಉದ್ದೇಶಕ್ಕೆ ನಿರ್ಮಿಸಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂದರು.

ಜಿಲ್ಲಾ ಪೆÇಲೀಸ್ ಅಧೀಕ್ಷಕ ಅಶೋಕ್ ಕೆ.ವಿ, ಮಾತನಾಡಿ, ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಪ್ರಕರಣಗಳು ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿಗಳನ್ನು ದಾಖಲಿಸಿ, ಕೃತ್ಯ ನಡೆದ ಸ್ಥಳಕ್ಕೆ ಪೊಲೀಸ್ ಉಪಾಧೀಕ್ಷಕರು ಭೇಟಿ ನೀಡಿ  ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಲ್ಲಾ ಪಿ.ಎಸ್.ಐ/ ಪಿ.ಐ/ ಸಿ.ಪಿ.ಐ/ಡಿ.ಎಸ್.ಪಿ.ಗಳಿಗೆ ಸೂಚನೆ ನೀಡಿದರಲ್ಲದೆ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ  ಪ್ರಕರಣಗಳನ್ನು ಪೆÇೀಲಿಸ್ ಇಲಾಖೆ ಅಧಿಕಾರಿಗಳು ಉದಾಸೀನ ಮಾಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಮಹಾನಗರ ಪಾಲಿಕೆಯ ಆಯುಕ್ತ ಬಿ.ವಿ.ಅಶ್ವಿಜ, ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಕೃಷ್ಣಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಜಾಗೃತಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *