ವಿಧಾನಸಭಾ ಚುನಾವಣೆ, ನಿಷೇಧಾಜ್ಞೆ ಜಾರಿ-ಡಿಸಿ

ತುಮಕೂರು : ವಿಧಾನಸಭಾ ಚುನಾವಣೆ-2023ರ ಸಂಬಂಧ ಚುನಾವಣಾ ಬಹಿರಂಗ ಪ್ರಚಾರವನ್ನು ನಿಯಂತ್ರಿಸಲು ಹಾಗೂ ಚುನಾವಣೆಯನ್ನು ಮುಕ್ತ, ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮೇ 8ರ ಸಂಜೆ 6 ಗಂಟೆಯಿಂದ ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೆ ತುಮಕೂರು ಜಿಲ್ಲೆಯಾದ್ಯಂತ ಅನ್ವಯವಾಗುವಂತೆ ನಿಷೇಧಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೈ.ಎಸ್. ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಮೇ 10ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿರುವ ಮತದಾನ ಕೇಂದ್ರಗಳ ಸ್ಥಳಕ್ಕೆ ಅನ್ವಯಿಸುವುದಿಲ್ಲ.   ನಿಷೇಧಾಜ್ಞೆಯ ಅವಧಿಯಲ್ಲಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ.  ನಿಷೇಧಾಜ್ಞೆಯ ಅವಧಿಯಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದಾಗಲಿ ಅಥವಾ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ.  ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮೆರವಣಿಗೆ ಮಾಡಬಾರದು.  ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿ ಪತ್ರಗಳನ್ನು ಪ್ರಕಟಿಸುವುದು ಮಾಡತಕ್ಕದ್ದಲ್ಲ.  ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು.  ಸಾರ್ವಜನಿಕ ಪ್ರಾಣ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸತಕ್ಕದ್ದಲ್ಲ.  ನಿಷೇಧಾಜ್ಞೆ ಅವಧಿಯಲ್ಲಿ ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ.  ಚುನಾವಣಾ ಆಯೋಗವು ನೀಡಿರುವ ಸ್ಪಷ್ಟೀಕರಣದಂತೆ ಮತದಾನದ ಹಿಂದಿನ 48 ಗಂಟೆಯ ಅವಧಿಯಲ್ಲಿ ಅಭ್ಯರ್ಥಿಯು ಮನೆ-ಮನೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡುವುದಕ್ಕೆ ವಿನಾಯತಿ ನೀಡಲಾಗಿದೆ.  ಈ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ. 

ಸಾರ್ವತ್ರಿಕ ರಜೆ ಘೋಷಣೆ
ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಂಬಂಧ ಮೇ 10, 2023ರ ಬುಧವಾರದಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಮತ ಚಲಾಯಿಸಲು ಅನುವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ವಿವಿಧ ಸಂಘ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳಿಗೆ(ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಸರ್ಕಾರವು ಸಾರ್ವತ್ರಿಕ ರಜೆಯನ್ನು ಘೋಷಿಸಿರುತ್ತದೆ.
ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು.
ಆಯಾ ಕ್ಷೇತ್ರಗಳಲ್ಲಿ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ದಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ಮೇ 9, 2023ರಂದು ಪೂರ್ವ ತಯಾರಿಗಾಗಿ ಹಾಗೂ ಮತ ಎಣಿಕೆ ನಡೆಯುವ ಮೇ 13, 2023ರಂದು ಮತ ಎಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಚುನವಣಾಧಿಕಾರಿಗಳು ಕ್ರಮವಹಿಸತಕ್ಕದ್ದು.

ವೇತನ ಸಹಿತ ರಜೆ
ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಂಬಂಧ ಮೇ 10, 2023ರ ಬುಧವಾರದಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಮತ ಚಲಾಯಿಸಲು ಅನುವಾಗುವಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳು, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಬ್ಯಾಂಕುಗಳು, ಇತರೆ ಬ್ಯಾಂಕುಗಳು, ಮುಂತಾದ ಕಚೇರಿಗಳಿಗೆ ಸೀಮಿತಗೊಳಿಸಿ ಸರ್ಕಾರವು ಸಾರ್ವಜನಿಕ ರಜೆಯನ್ನು ಘೋಷಿಸಿರುತ್ತದೆ.
ಯಾವುದೇ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಅಥವಾ ಇನ್ನಿತರ ಸಾರ್ವಜನಿಕ ಸಂಸ್ಥೆಗಳಲ್ಲಿ ಖಾಯಂ ಮತ್ತು ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಮತದಾನ ದಿನದಂದು ವೇತನ ಸಹಿತ ರಜೆಗೆ ಅರ್ಹರಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *