ಆ.15ರ ಸ್ವಾತಂತ್ರ್ಯ ದಿನಾಚರಣೆ : ಸಕಲ ಸಿದ್ಧತೆ

ತುಮಕೂರು : ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 15ರಂದು ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ತಿಳಿಸಿದರು.

ಉಪವಿಭಾಗಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆ ವತಿಯಿಂದ ಟೌನ್ ಹಾಲ್, ಚರ್ಚ್ ಸರ್ಕಲ್, ಭದ್ರಮ್ಮ ವೃತ್ತ, ಶಿವಕುಮಾರ ಸ್ವಾಮೀಜಿ ವೃತ್ತ ಸೇರಿ ನಗರ ಪ್ರಮುಖ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕೆಂದು ಪಾಲಿಕೆಗೆ ಜವಾಬ್ದಾರಿವಹಿಸಿದರು.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಂದು ಸಂಜೆ 4.30 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುರೇಶ್ ಸಭೆಗೆ ಮಾಹಿತಿ ತಿಳಿಸಿದರಲ್ಲದೆ ಪ್ರೌಢಶಾಲಾ ವಿದ್ಯಾರ್ಥಿಗಳಿಂದ 9 ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ 3 ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು.
ತೋಟಗಾರಿಕೆ ಇಲಾಖೆಯಿಂದ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ವೇದಿಕೆ ಮುಂಭಾಗ ಹೂವಿನ ಕುಂಡ ಹಾಗೂ ಅಲಂಕಾರಿಕ ಗಿಡಗಳ ವ್ಯವಸ್ಥೆ ಮಾಡಲು ಸೂಚನೆ ನೀಡಿದರು.

ಪ್ರೌಢಶಾಲಾ ವಿದ್ಯಾರ್ಥಿಗಳಿಂದ 5 ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಶಾಲಾ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದರು.

ಜಿಲ್ಲಾ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಕೆಎಂಎಫ್ ಅಧಿಕಾರಿಗಳಿಗೆ ತಿಳಿಸಿದರು.

ಕ್ರೀಡಾಂಗಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆ್ಯಂಬುಲೆನ್ಸ್, ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ಹಾಗೂ ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು. ಸಭೆಯಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *