ನಮ್ಮ ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಗರೂ ಗ್ಯಾರಂಟಿ ಫಲಾನುಭವಿಗಳು-ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು : ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದ್ದು, ನಾವು ನೀಡಿದ್ದ ಐದೂ ಗ್ಯಾರಂಟಿಗಳನ್ನು ಈಡೇರಿಸಿದ್ದು, ನಮ್ಮ ಸರ್ಕಾರ ಭರವಸೆಗಳನ್ನು ಈಡೇರಿಸಿಲ್ಲ ಎಂದು ಸುಳ್ಳು ಉತ್ಪಾದಕರು ನಮ್ಮ ಸರ್ಕಾರದ ಫಲಾನುಭವಿಗಳಾಗಿದ್ದಾರೆ, ನಮ್ಮ ಸರ್ಕಾರದ ಗ್ಯಾರಂಟಿ ಪಡೆದವರು ಗ್ಯಾರಂಟಿಗಳನ್ನು ಟೀಕಿಸುವ ಬಿಜೆಪಿಗೆ ನೀಡಬೇಕು ಉತ್ತರ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಒಂದೇ ದಿನ 697.27 ಕೋಟಿ ರೂ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, ಮಾತನಾಡುತ್ತಿದ್ದರು.

“ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಸರ್ಕಾರದಲ್ಲಿ ಹಣ ಇಲ್ಲ ಎಂದು ಸುಳ್ಳು ಸುಳ್ಳು ಹೇಳುವವರಿಗೆ ಇಂದಿನ ಕಾರ್ಯಕ್ರಮವೇ ಒಂದು ಉತ್ತರ. ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಈ ಯೋಜನೆಗಳ ಫಲಾನುಭವಿಗಳು ಸುಳ್ಳು ಹೇಳುವವರಿಗೆ ಸರಿಯಾದ ಉತ್ತರ ನೀಡಬೇಕು” ಎಂದು ಹೇಳಿದರು.
ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನೂ ನೀಡಿಲ್ಲ. ಆದರೆ ರಾಜ್ಯ ಸರ್ಕಾರ 29,28,910 ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತನ್ನು ಜಮೆ ಮಾಡಿದೆ” ಎಂದು ದಾಖಲೆಗಳ ಸಮೇತ ವಿವರಿಸಿದರು

“ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆ ಎತ್ತಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದರಿಂದ ಕೇಂದ್ರದ ಬೆಲೆ ಏರಿಕೆಯಿಂದಾಗಿ ಸೃಷ್ಟಿಯಾಗಿದ್ದ ಸಂಕಷ್ಟವನ್ನು ನಾವು ಕಡಿಮೆ ಮಾಡಿದ್ದೇವೆ. ಆದರೂ ಬಿಜೆಪಿ ಪರಿವಾರ ಸುಳ್ಳಿನ ಉತ್ಪಾದನೆಯಲ್ಲಿ ತೊಡಗಿದ್ದಾರೆ” ಎಂದು ಬಿಜೆಪಿಯನ್ನು ಕಟುವಾಗಿ ಟೀಕಿಸಿದರು.
“142 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಒಂದು ಕೋಟಿ 50 ಲಕ್ಷ ಮಹಿಳೆಯರಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಅನುಕೂಲಗಳು ತಲುಪುತ್ತಿವೆ. ಒಂದು ಕೋಟಿ 18 ಲಕ್ಷ ಮಂದಿಗೆ ಗೃಹಜ್ಯೋತಿಯ ಅನುಕೂಲಗಳು ಸಿಕ್ಕುತ್ತಿವೆ. ಯುವನಿಧಿಗಾಗಿ ಲಕ್ಷಾಂತರ ಯುವಕ ಯುವತಿಯರು ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

“2013-18 ರ ವರೆಗೆ ನಾವು ಕೊಟ್ಟ ಎಲ್ಲಾ ಭರವಸೆಗಳನ್ನೂ ಈಡೇರಿಸಿದ್ದೇವೆ. ಈ ಬಾರಿ ಚುನಾವಣೆ ವೇಳೆಯಲ್ಲಿ ಕೊಟ್ಟಿದ್ದ ಐದು ಗ್ಯಾರಂಟಿಗಳನ್ನು 8 ತಿಂಗಳ ಒಳಗೆ ಜಾರಿ ಮಾಡಿದ್ದೇವೆ. ಉಳಿದ ಭರವಸೆಗಳನ್ನೂ ಈಡೇರಿಸುತ್ತಲೇ ಇದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿಯವರೂ ಇದ್ದಾರೆ. ಆದರೂ ಬಿಜೆಪಿಯವರು ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳುಗಳ ಉತ್ಪಾದನೆಯಲ್ಲಿ ತೊಡಗಿದ್ದಾರೆ” ಎಂದು ಫಲಾನುಭವಿಗಳ ಪಟ್ಟಿ ನೀಡಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸಹಕಾರಸಚಿವ ಕೆ.ಎನ್.ರಾಜಣ್ಣ, ಕೃಷಿ ಸಚಿವ ಕೃಷ್ಣ ಭೈರೇಗೌಡ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿದಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಶಾಸಕರುಗಳು ಮತ್ತು ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಭಾಗವಹಸಿದ್ದರು.

Leave a Reply

Your email address will not be published. Required fields are marked *