ತುಮಕೂರು : ಜಿಲ್ಲೆಯ ಸೋರೆಕುಂಟೆ ಬಳಿಯ ಪಿ. ಗೊಲ್ಲಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು.
ಕ್ರೀಡಾಂಗಣ ನಿರ್ಮಾಣಕ್ಕಾಗಿ ಮಂಜೂರಾಗಿರುವ ಜಮೀನುಗಳ ಆದೇಶ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಹಸ್ತಾಂತರಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದೆ. ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಕ್ರೀಡಾ ಪ್ರಗತಿಗೆ ಕ್ರೀಡಾಂಗಣ ಪೂರಕವಾಗಲಿದೆ ಎಂದು ತಿಳಿಸಿದರು.
ಶೀಘ್ರವಾಗಿ ಕ್ರೀಡಾಂಗಣ ನಿರ್ಮಾಣ ಮಾಡಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಬೇಡಿಕೆಯಿಟ್ಟಿದ್ದು, ಮೈಸೂರಿನಲ್ಲೂ ಸಹ ಕ್ರೀಡಾಂಗಣವನ್ನು ನಿರ್ಮಿಸಲು ಸರ್ಕಾರದಿಂದ ಜಾಗ ಕೊಡಲಾಗುವುದು ಎಂದು ತಿಳಿಸಿದರು.
ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಮಾತನಾಡಿ, ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಜೊತೆಗೆ ಅಂತರಾಷ್ಟ್ರೀಯ ಕ್ರಿಕೆಟ್ ತರಬೇತಿ ಸಂಸ್ಥೆ(ಕೆಎಸ್‍ಸಿಎ) ನಿರ್ಮಿಸಲು ಅಡಿಗಲ್ಲು ಹಾಕುವುದರ ಮೂಲಕ ಜಿಲ್ಲೆಯ ಜನರ ಅನೇಕ ವರ್ಷಗಳ ಕನಸು ನನಸಾಗಿದೆ ಎಂದು ತಿಳಿಸಿದರು.
ಕೆಎಸ್‍ಸಿಎ ಎರಡು ವರ್ಷದಲ್ಲಿ ಸ್ಟೇಡಿಯಂ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ವಸಂತನರಸಪುರದಲ್ಲಿ ಫುಡ್ ಪಾರ್ಕ್ ಆರಂಭವಾಗಿದ್ದು, ಜಪಾನೀಸ್ ಟೌಪ್‍ಶಿಪ್ ನಿರ್ಮಾಣಕ್ಕೆ 500 ಎಕರೆ ಪ್ರದೇಶವನ್ನು ನೀಡಲಾಗಿದೆ ಎಂದು ತಿಳಿಸಿದರಲ್ಲದೆ, ಕೈಗಾರಿಕಾ ಪ್ರದೇಶಕ್ಕಾಗಿ ಭೂಮಿಯನ್ನು ಕಳೆದುಕೊಂಡವರಿಗೆ ಉದ್ಯೋಗ ಸಿಗುವಂತಾಗಬೇಕು. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗುವಂತಾಗಬೇಕು ಎಂದರಲ್ಲದೆ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ: ಕೆ.ಗೋವಿಂದರಾಜು, ಶಾಸಕರಾದ ಬಿ.ಸುರೇಶ್‍ಗೌಡ, ಜ್ಯೋತಿಗಣೇಶ್, ಸುರೇಶ್, ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಆರ್.ರಾಜೇಂದ್ರ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಶಂಕರ್, ಮಾಜಿ ಶಾಸಕ ಗೌರಿಶಂಕರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ಮತ್ತಿರರಿದ್ದರು.