ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ-ಸಿಐಡಿ ತನಿಖೆಗೆ-ಗೃಹ ಸಚಿವರು

ತುಮಕೂರು- ಕಲ್ಬುರ್ಗಿಯ ಸಿಂಚೋಳಿ ತಾಲ್ಲೂಕಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಚೋಳಿ ತಾಲ್ಲೂಕಿನಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಎಂಬುವರು ಸಚಿವ ಡಾ. ಶರಣಪ್ರಕಾಶ್ ಅವರ ಹೆಸರೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ ಎಂದರು.

ಈ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದಾರೆ ಎಂದು ಕೆಲವರು ಹೇಳಿಕೆ ಕೊಡುತ್ತಿದ್ದಾರೆ. ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಆ ವ್ಯಕ್ತಿ ತಮಗೆ ಗೊತ್ತಿಲ್ಲ ಎಂದು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೂ ಸಮಗ್ರ ತನಿಖೆಯಾಗಲಿ ಎಂಬ ಉದ್ದೇಶದಿಂದ ಸಿಐಡಿಗೆ ಈ ಪ್ರಕರಣವನ್ನು ವಹಿಸಲಾಗುತ್ತಿದೆ ಎಂದು ಹೇಳಿದರು.

ಈ ಪ್ರಕರಣ ಕುರಿತು ತನಿಖೆ ನಡೆದ ವರದಿ ಬಂದ ನಂತರ ಸತ್ಯಾಂಶ ಹೊರ ಬರಲಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ. ಈಗ ಮತ್ತೊಂದು ವರದಿಯನ್ನು ಸಿದ್ದಪಡಿಸುತ್ತಿದ್ದು, 25 ತಾಲ್ಲೂಕುಗಳನ್ನು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದೆ. ಸದ್ಯದಲ್ಲೇ ಈ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ಬೇಸಿಗೆ ಬರುತ್ತಿದ್ದಂತೆ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಹಣ ಇಡಲಾಗಿದೆ. ಹಾಗೆಯೇ ತುಮಕೂರು ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 19 ಕೋಟಿ ಹಣ ಇದ್ದು, ತಾಲ್ಲೂಕುವಾರು ಅರ್ಜಿಗಳನ್ನು ಪಡೆದು ಕುಡಿಯುವ ನೀರು, ಮೇವು, ಕಾಮಗಾರಿಗಳು ಹಾಗೂ ಗೋಶಾಲೆಗೆ ಹಣ ಖರ್ಚು ಮಾಡಲು ಸೂಚನೆ ನೀಡಲಾಗಿದೆ ಎಂದರು.

Leave a Reply

Your email address will not be published. Required fields are marked *