ತುಮಕೂರು, – ಮುಂದಿನ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ಮೂರು ಸಾವಿರ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯ್ತಿಯಲ್ಲಿಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆ ಪ್ರಗತಿಪರಿಶೀಲನೆ ನಡೆಸಿದ ಅವರು, ರಾಜ್ಯದ ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕಿದೆ. ಈ ನಿಟ್ಟಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು. ಪ್ರಸಕ್ತ ವರ್ಷದಲ್ಲೇ 500 ಕೆಪಿಎಸ್ ಶಾಲೆಗಳನ್ನು ಆರಂಭಿಲಾಗುತ್ತಿದೆ ಎಂದರು.
ಕೆಪಿಎಸ್ ಶಾಲೆಗಳನ್ನು ಆರಂಭಿಸುವುದರಿಂದ ಮುಂದಿನ ಮೂರು ವರ್ಷಗಳಲ್ಲಿ ಸುಮಾರು 45 ಲಕ್ಷ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿದೆ ಎಂದರು.
ಕೆಪಿಎಸ್ ಶಾಲೆಗಳನ್ನು ಸಂಪೂರ್ಣವಾಗಿ ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ಉತ್ತಮ ಗುಣ ಮಟ್ಟದ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುತ್ತಿದೆ ಎಂದರು.
ಮತ್ತೆ 12ಸಾವಿರ ಶಿಕ್ಷಕರ ನೇಮಮಕಾತಿ:
ಶಾಲಾ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಈಗಾಗಲೆ 12ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದ್ದು ಹೆಚ್ಚುವರಿಯಾಗಿ ಇನ್ನು 12 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಪ್ರಸಕ್ತ ಶೈಕ್ಷಣಿಕ ವರ್ಷಾರಂಭಕ್ಕೆ ಮುನ್ನವೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ ಅಲ್ಲದೆ ಅನುದಾನಿತ ಶಾಲೆಗಳಲ್ಲಿ ಐದು ವರ್ಷಗಳಿಂದಲೂ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಅನುಮತಿ ನೀಡಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ 2ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು 1008 ಅಂಗನವಾಡಿಗಳಲ್ಲಿ ಎಲ್ ಕೆ ಜಿ – ಯು ಕೆ ಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32ಸಾವಿರ ಮಕ್ಕಳು ದಾಖಲಾಗುವ ಮೂಲಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಚಿವರು ತಿಳಿಸಿದರು.
ಶಾಲಾ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ನಿಟ್ಟನಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರೊಂದಿಗೆ 1500ಕೋಟಿ ರೂ ವೆಚ್ವದ ಯೋಜನೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ನೀಡಲಾಗುವುದು ಎಂದರು.
ಪೋಷಕರು ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳಿಸಬೇಕು. ಇದರಿಂದ ಸರ್ಕಾರದ ಈ ಯೋಜನೆಗಳು ಸಾರ್ಥಕತೆ ಪಡೆಯುತ್ತವೆ ಎಂದರು.
ಅಲ್ಲದೆ ಸರ್ಕಾರಿ ಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಶಾಲಾ ಶಿಕ್ಷಕರು ವಾರಕ್ಕೊಮ್ಮೆ ವಿಶೇಷ ತರಗತಿ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.