ತುಮಕೂರು : ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲರೂ ಒಗ್ಗೂಡಿ ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬರುವ ಆಗಸ್ಟ್ 15ರಂದು ನಾವೆಲ್ಲರೂ ಸಂತಸದಿಂದ ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ತಿಳಿಸಿದರು.
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬವನ್ನು ಆಚರಿಸಲು ಇಂದಿನಿಂದಲೇ ಪೂರ್ವ ತಯಾರಿ ನಡೆಸಬೇಕು. ಖಾಸಗಿ ಸೇರಿದಂತೆ ಸರ್ಕಾರಿ ಶಾಲಾ-ಕಾಲೇಜು, ವಸತಿ ನಿಲಯಗಳ ಮಕ್ಕಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕಲ್ಲದೆ ಸ್ವಚ್ಛತೆ, ಪರಿಸರ ಸಂರಕ್ಷಣೆ, ರಸ್ತೆ ಸುರಕ್ಷತೆ, ಜೀವಜಲ ಸಂರಕ್ಷಣೆಯಂತಹ ವಿಷಯಾಧಾರಿತ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಉತ್ತಮ ಪ್ರದರ್ಶನ ನೀಡಿದ ಶಾಲಾ ಮಕ್ಕಳಿಗೆ ಬಹುಮಾನ ನೀಡಬೇಕು ಎಂದರಲ್ಲದೆ ಅಗ್ನಿಶಾಮಕ ಇಲಾಖೆಯ ವತಿಯಿಂದ ಅನಿಲ ಸೋರಿಕೆ, ಅಗ್ನಿ ದುರಂತ ಕುರಿತು ಅಣುಕು ಪ್ರದರ್ಶನ ಏರ್ಪಡಿಸಬೇಕೆಂದು ಸೂಚಿಸಿದರು.