ತುಮಕೂರು : ಬರುವ ಮಾರ್ಚ್ ಮಾಹೆಗೆ ಆರ್ಥಿಕ ವರ್ಷ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾಗಿರುವ ಅನುದಾನ ರದ್ದಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ದೀಪ ಚೋಳನ್ ಅವರು ಎಲ್ಲಾ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಲಿಂಕ್‍ಡಾಕ್ಯುಮೆಂಟ್, ರಾಜ್ಯ ಹಾಗೂ ಕೇಂದ್ರದಿಂದ ಯಾವುದೇ ಕಾಮಗಾರಿ/ಕಾರ್ಯಕ್ರಮ/ಯೋಜನೆಗಳಿಗೆ ಬಿಡುಗಡೆಯಾದ ಅನುದಾನವನ್ನು ರದ್ದಾಗದಂತೆ ಈ ಆರ್ಥಿಕ ವರ್ಷದೊಳಗಾಗಿ ಖರ್ಚು ಮಾಡಬೇಕು ಎಂದು ನಿರ್ದೇಶನ ನೀಡಿದರು.
ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವುದರಲ್ಲಿ ಜಿಲ್ಲೆಯು ಮೊದಲ ಸ್ಥಾನದಲ್ಲಿರಬೇಕು. ಯಾವುದೇ ಕಾಮಗಾರಿಗಳನ್ನು ಬಾಕಿ ಉಳಿಸಿಕೊಳ್ಳಬಾರದು ಎಂದು ತಿಳಿಸಿದರಲ್ಲದೆ, ಮಳೆಯಿಂದ ಶಿಥಿಲವಾದ ಶಾಲಾ ಕೊಠಡಿಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ಕಾಲ ಕಾಲಕ್ಕೆ ದುರಸ್ತಿ ಕೈಗೊಂಡಲ್ಲಿ ಮಕ್ಕಳಿಗೆ ತರಗತಿ ನಡೆಸಲು ಕೊಠಡಿಗಳ ಕೊರತೆ ಉಂಟಾಗದು ಎಂದು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು ಅಂಕಿ-ಅಂಶಗಳ ಪ್ರಕಾರ ಸರ್ಕಾರದಿಂದ ಮಂಜೂರಾದ 683 ಅಂಗನವಾಡಿ ಕಟ್ಟಡಗಳ ಪೈಕಿ 548 ಕಟ್ಟಡಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದಂತೆ 84 ಕಟ್ಟಡ ಕಾಮಗಾರಿಗಳು ಪ್ರಗತಿಯಲ್ಲಿದ್ದು, 51 ಕಟ್ಟಡಗಳನ್ನು ಪ್ರಾರಂಭಿಸಿಯೇ ಇಲ್ಲ. ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸಬಹುದಾದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಈವರೆಗೂ ಪ್ರಾರಂಭಿಸದೆ ಬಾಕಿ ಉಳಿಸಲು ಕಾರಣವೇನೆಂದು ಪ್ರಶ್ನಿಸಿದಾಗ ಇಲಾಖಾಧಿಕಾರಿ ದಿನೇಶ್ ಮಾಹಿತಿ ನೀಡುತ್ತಾ, ಶೀಘ್ರದಲ್ಲಿಯೇ ಸ್ಥಳೀಯ ಜನಪ್ರತಿನಿಧಿಗಳಿಂದ ಕಾಮಗಾರಿಯ ಚಾಲನೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಂತರ ಮಾತನಾಡಿದ ಕಾರ್ಯದರ್ಶಿಗಳು ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಕ್ರಮಕೈಗೊಳ್ಳಬೇಕು. ಯಾವುದೇ ಸಬೂಬು ನೀಡದೆ ಮಂಜೂರಾದ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.
ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ತಜ್ಞ ವೈದ್ಯರ ಕೊರತೆಯಿದೆ ಎಂದು ಕಾರ್ಯದರ್ಶಿಗಳ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ದೀಪ ಚೋಳನ್ ಗುತ್ತಿಗೆ ಆಧಾರದಲ್ಲಿ ತಜ್ಞ ವೈದ್ಯರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿದ್ದು, ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್ ಸಭೆಗೆ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯಡಿ ನಿಯಮ ಉಲ್ಲಂಘಿಸಿದ ತುರುವೇಕೆರೆ ಹಾಗೂ ಕುಣಿಗಲ್‍ನಲ್ಲಿ 2 ಸ್ಕ್ಯಾನಿಂಗ್ ಸೆಂಟರ್ ಹಾಗೂ ಹುಳಿಯಾರಿನಲ್ಲಿ 1 ನರ್ಸಿಂಗ್ ಹೋಮ್ ಅನ್ನು ಜಪ್ತಿ ಮಾಡಲಾಗಿದೆ. ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ ಶಾಲಾ ಕಾಲೇಜುಗಳಲ್ಲಿ ಕಾಲ-ಕಾಲಕ್ಕೆ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತುಮಕೂರು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಾರ್ಯಕ್ರಮದಡಿ ಮನೆ-ಮನೆಗೆ ಭೇಟಿ ನೀಡಿ ಈವರೆಗೂ 7ಲಕ್ಷ ಜನರ ಆರೋಗ್ಯ ತಪಾಸಣೆ ಮಾಡುವ ಮೂಲಕ ಮಧುಮೇಹ, ರಕ್ತದೊತ್ತಡ, ಕುಷ್ಠರೋಗ, ಕ್ಷಯ ಸೇರಿದಂತೆ ವಿವಿಧ ರೋಗಗಳನ್ನು ಪತ್ತೆ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಕೃಷಿ ಜಂಟಿ ನಿರ್ದೇಶಕ ರಮೇಶ್ ಮಾತನಾಡಿ, ಕೃಷಿ ಭಾಗ್ಯ ಯೋಜನೆಯಡಿ 3 ಕೋಟಿ ರೂ. ವೆಚ್ಚದಲ್ಲಿ ಕೃಷಿ ಹೊಂಡ, ಕ್ಷೇತ್ರ ಬದು, ಪಾಲಿಥೀನ್ ಹೊದಿಕೆ, ತುಂತುರು ನೀರಾವರಿ ಘಟಕ, ಡೀಸೆಲ್ ಪಂಪ್ ಸೆಟ್ ಹಾಗೂ ಹೊಂಡದ ಸುತ್ತ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಆರ್ಥಿಕ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶುಪಾಲನೆ, ಶಿಕ್ಷಣ, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಕಲ್ಯಾಣ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.