
ತುಮಕೂರು : ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಮರಗಳನ್ನು ಮಕ್ಕಳಂತೆ ಪೋಷಿಸಬೇಕು. ಸಾಲುಮರದ ತಿಮ್ಮಕ್ಕ, ಚಿಪ್ಕೋ ಚಳವಳಿಯ ನೇತಾರ ಸುಂದರಲಾಲ್ ಬಹುಗುಣರವರು ನಮ್ಮೆಲ್ಲರ ಸ್ಪೂರ್ತಿ. ಅವರ ಹಾದಿಯಲ್ಲಿ ನಾವು ನಡೆದು ಪರಿಸರ ರಕ್ಷಿಸೋಣ ಎಂದು ಗೃಹಮಂತ್ರಿ ಹಾಗೂ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಜಿ.ಪರಮೇಶ್ವರ ಹೇಳಿದರು.
ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಮಾನವನ ದುರಾಸೆಯ ಪರಿಣಾಮವಾಗಿ ಇಂದು ಜಾಗತಿಕ ತಾಪಮಾನದಲ್ಲಿ ಹೆಚ್ಚಳ, ಅತಿವೃಷ್ಟಿ, ಅನಾವೃಷ್ಟಿ ಉಂಟಾಗುತ್ತಿವೆ. ಪರಿಸರದ ಭಾಗವಾಗಿರುವ ನಾವೆಲ್ಲರೂ ಇದನ್ನು ಉಳಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಸುತ್ತಲೂ ಸಸಿಗಳನ್ನು ನೆಡಲಾಯಿತು. ರೇಡಿಯೋ ಸಿದ್ಧಾರ್ಥದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪ್ರಸಾರ ಮಾಡಲಯಿತು. ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಪ್ಯಾರಾ ಮೆಡಿಕಲ್ ವಿಭಾಗದ ವತಿಯಿಂದ ಜಾಗೃತಿ ಜಾಥಾ ನಡೆಯಿತು.
ಟೌನ್‍ಹಾಲ್ ಸರ್ಕಲ್‍ನಿಂದ ಆರಂಭಗೊಂಡ ಜಾಗೃತಿ ಜಾಥಾದಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದರು. ಜಾಥಾದಲ್ಲಿ ಪರಿಸರ ಸಂರಕ್ಷಣೆ ಕುರಿತು ಘೋಷಣೆ ಕೂಗುತ್ತ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊರ್ಟ್ ಸರ್ಕಲ್‍ಗೆ ತಲುಪಿತು.
ಕಾರ್ಯಕ್ರಮದಲ್ಲಿ ಸಾಹೇ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಸಾಹೇ ರಿಜಿಸ್ಟ್ರಾರ್ ಡಾ.ಎಂ.ಜೆಡ್ ಕುರಿಯನ್, ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಪ್ರಭಾಕರ, ಕುಲಾಧಿಪತಿ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ ಸೇರಿದಂತೆ ವೈದ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.