ಕೇಂದ್ರ ಕೊಟ್ಟ ಗೊಬ್ಬರ ಕಾಳಸಂತೆಯಲ್ಲಿ ಮಾರಾಟ: ವಿಜಯೇಂದ್ರ

ತುಮಕೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ರಸಗೊಬ್ಬರ ರೈತರಿಗೆ ಹಂಚಿಕೆ ಮಾಡದೆ ದಳ್ಳಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಗೊಬ್ಬರಕ್ಕಾಗಿ ದಿನಬೆಳಗ್ಗೆ ಸಾಲುಗಟ್ಟಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಬೀದಿಪಾಲು ಮಾಡಿದೆ. ರೈತರ ಕಣ್ಣಲ್ಲಿ ನೀರು ತರಿಸುವ ಯಾವುದೇ ಸರ್ಕಾರಕ್ಕೆ ಒಳ್ಳೆಯದಾಗುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ರೈತ ಮೋರ್ಚಾ ನೇತೃತ್ವದ ಪ್ರತಿಭಟನೆ ಅಂಗವಾಗಿ ಮಂಗಳವಾರ ನಗರದ ಬಿಜಿಎಸ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದರು. ಜಿಲ್ಲಾಧಿಕಾರಿ ಕಚೇರಿ ಬಳಿ ಮಾತನಾಡಿದ ವಿಜಯೇಂದ್ರ, ಈ ಬಾರಿ ಮುಂಗಾರು ಉತ್ತಮವಾಗಿದೆ ಎಂದು ಹವಾಮಾನ ಇಲಾಖೆ ಮೂರು ತಿಂಗಳ ಮೊದಲೇ ಮುನ್ಸೂಚನೆ ನೀಡಿದ್ದು, ರೈತರಿಗೆ ಗೊಬ್ಬರದ ಬೇಡಿಕೆ ಹೆಚ್ಚಾಗುತ್ತದೆ ಎಂದು ಪೂರಕ ಪೂರ್ವ ಸಿದ್ಧತೆ ಮಾಡಿಕೊಂಡು ಗೊಬ್ಬರ ದಾಸ್ತಾನು ಮಾಡದೆ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿ ಅವರು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿಗೆ ತಂದಿದೆ ಎಂದರು.

ರಾಜ್ಯಕ್ಕೆ ಯೂರಿಯಾ ಗೊಬ್ಬರವು 6.30 ಲಕ್ಷಟನ್ ಅವಶ್ಯಕತೆ ಇದ್ದು, ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಅವಶ್ಯಕತೆಗಿಂಥಾ ಹೆಚ್ಚಾಗಿ ಕರ್ನಾಟಕಕ್ಕೆ ನೀಡಿದೆ. ಈ ಗೊಬ್ಬರವನ್ನು ರೈತರಿಗೆ ನೀಡದೆ ದಳ್ಳಾಳಿಗಳಿಂದ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಇರುವ ಕಡೆ ದಳ್ಳಾಳಿಗಳು, ಕಾಳಸಂತೆಕೋರರು ತುಂಬಿರುತ್ತಾರೆ. ಆದರೆ ರೈತರು ದುಪ್ಪಟ್ಟು ಹಣ ಕೊಟ್ಟು ಗೊಬ್ಬರ ಕೊಳ್ಳುವಂತಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ತಿಂಗಳಲ್ಲಿ ನಾಲ್ಕು ಬಾರಿ ದೆಹಲಿಗೆ ಹೋಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಯ ಗೇಟ್ ಕಾಯುತ್ತಾರೆ. ಆದರೆ ದೆಹಲಿಯಲ್ಲಿ ಪ್ರಧಾನ ಮಂತ್ರಿ, ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ನಾಲ್ಕು ಬಾರಿ ಇವರು ದೆಹಲಿಗೆ ಹೋಗುತ್ತಾರೆ, ಮೂರು ಬಾರು ಸುರ್ಜೆವಾಲ ಬೆಂಗಳೂರಿಗೆ ಬಂದು, ಇವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕೆ, ಬೇರೆಯವರನ್ನು ಮಾಡಬೇಕೆ ಎಂದು ಸಭೆ ಮಾಡುತ್ತಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹಾಳಾಗಿದೆ. ಇದೊಂದು ಲಜ್ಜೆಗೆಟ್ಟ ಸರ್ಕಾರ. ತಮ್ಮ ಲೋಪ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರ, ಪ್ರಧಾನಿ ಮೋದಿಯವರನ್ನು ಟೀಕಿಸುತ್ತಾರೆ. ರಾಜ್ಯದ ಕೃಷಿ ಮಂತ್ರಿಯ ಅವಿವೇಕತನದಿಂದ ಇಂದು ಗೊಬ್ಬರ ಸಮಸ್ಯೆ ಉಂಟಾಗಿದೆ. ಮಂಡ್ಯ, ಬೆಂಗಳೂರು ಬಿಟ್ಟು ಕೃಷಿ ಮಂತ್ರಿ ಜಿಲ್ಲೆಗಳ ಪ್ರವಾಸ ಮಾಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿಲ್ಲ. ಮುಖ್ಯಮಂತ್ರಿ ಕೂಡಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ರೈತರ ಸ್ಥಿತಿಗತಿ ಪರಿಶೀಲಿಸಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಕೊಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆಯ 6 ಸಾವಿರ ರೂ. ಜೊತೆಗೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರದಿಂದ 4 ಸಾವಿರ ರೂ. ನೀಡುತ್ತಿದ್ದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ರೈತರ ಮಕ್ಕಳ ಶಿಕ್ಷಣಕ್ಕೆ ಸಹಾಯವಾಗುವ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಎರಡೂ ಯೋಜನೆಗಳನ್ನು ನಿಲ್ಲಿಸಿ ರೈತರಿಗೆ ಅನ್ಯಾಯ ಮಾಡಿದೆ. ರೈತ ವಿರೋಧಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸುತ್ತದೆ ಎಂದು ಹೇಳಿದರು.

ಶಾಸಕ ಬಿ.ಸುರೇಶ್‍ಗೌಡರು ಮಾತನಾಡಿ, ಕೇಂದ್ರ ಸರ್ಕಾರ ಕೊಟ್ಟ ಗೊಬ್ಬರವನ್ನು ಅನ್ನದಾತರಿಗೆ ನೀಡದ ಕಾಂಗ್ರೆಸ್ ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿ ಮಾಡಿದ್ದಾರೆ. ಕೆಲಸ ಮಾಡಲು ಹಣವಿಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿಗಳನ್ನು ಟೀಕಿಸುವ ‘ಬ್ಲೇಮ್ ಗೇಮ್’ನಲ್ಲಿ ನಿರತರಾಗಿದ್ದಾರೆ. ಕೃಷಿ ಸಚಿವರು ಜಿಲ್ಲೆಗಳ ಪ್ರವಾಸ ಮಾಡಿ ರೈತರ ಸ್ಥಿತಿಗತಿ ಮಾಹಿತಿ ಪಡೆಯುವ ಪ್ರಯತ್ನ ಮಾಡದೆ, ಮಂಡ್ಯದಲ್ಲಿದ್ದುಕೊಂಡು ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಟೀಕಿಸುವುದನ್ನೇ ವೃತ್ತಿ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರದಲ್ಲಿ ಅಧಿಕಾರದ ಕಿತ್ತಾಟ ನಡೆಯುತ್ತಿದೆ. ರೈತರ ಸಮಸ್ಯೆಗಳ ಬಗ್ಗೆ ಯಾವ ಸಚಿವರಿಗೂ ಕಾಳಜಿಯಿಲ್ಲ. 136 ಸೀಟು ಗೆಲ್ಲಿಸಿಕೊಟ್ಟ ರಾಜ್ಯದ ಜನರ ಎದುರು ಕಾಂಗ್ರೆಸ್‍ನವರು ದುರಹಂಕಾರದಿಂದ ಮೆರೆಯುತ್ತಿದ್ದಾರೆ. ಈ ಸರ್ಕಾರ ತೊಲಗಬೇಕು ಎಂದು ಜನ ನಿರ್ಧಾರ ಮಾಡಿದ್ದಾರೆ, ತಕ್ಕ ಪಾಠ ಕಲಿಸುತ್ತಾರೆ ಎಂದು ಸುರೇಶ್‍ಗೌಡ ಹೇಳಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕೇಂದ್ರದಿಂದ ಕೊಟ್ಟ ಗೊಬ್ಬವನ್ನು ರೈತರಿಗೆ ಕೊಡದೆ ಪ್ರತಿಯೊಂದು ವಿಚಾರದಲ್ಲೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಮಾನ್ಸೂನ್ ಮುನ್ಸೂಚನೆಯಂತೆ ಅತಿ ಹೆಚ್ಚು ಗೊಬ್ಬರವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ವಿತರಿಸಿದ್ದರೂ ಕೂಡಾ ರೈತರಿಗೆ ಸಮರ್ಪಕವಾಗಿ ವಿತರಣೆ ಮಾಡಿಲ್ಲ ಎಂದರು.

ಕಾಂಗ್ರೆಸ್ ನಾಯಕರು ರೈತರ ಹಿತ ಕಾಪಾಡಲು ಒಂದು ಹೆಜ್ಜೆ ಮುಂದೆ ಹೋಗಿ ರಾಜ್ಯಕ್ಕೆ ಏನೇನು ಬೇಕು ಎಂದು ಕೇಂದ್ರದ ಸಚಿವರಲ್ಲಿ ಕೇಳಬೇಕಾಗಿತ್ತು. ಅದುಬಿಟ್ಟು ಕೇಂದ್ರವನ್ನು ಟೀಕೆ ಮಾಡುವುದು ಅತ್ಯಂತ ಕೆಟ್ಟ ಸರ್ಕಾರದ ಚಾಳಿಯಾಗಿದೆ. ರೈತರ ಪರ ನಿಲ್ಲಲು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯಾದ್ಯಂತ ನಡೆಸುತ್ತಿರುವ ಹೋರಾಟ ಯಶಸ್ವಿಯಾಗಲಿ, ರೈತರಿಗೆ ನ್ಯಾಯ ಸಿಗಲಿ ಎಂದು ಆಶಿಸಿದರು.

ನಂತರ ವಿಜಯೇಂದ್ರ ಅವರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಮಾಜಿ ಸಚಿವ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ, ಮಾಜಿ ಶಾಸಕರಾದ ಮಸಾಲೆ ಜಯರಾಂ, ಎಂ.ಡಿ.ಲಕ್ಷ್ಮೀನಾರಾಯಣ, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಪ್ರಧಾನ ಕಾರ್ಯದರ್ಶಿ ಗಂಗರಾಜು, ಮಾಜಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಮುಖಂಡರಾದ ಎಸ್.ಪಿ.ಚಿದಾನಂದ್, ಡಿ.ಕೃಷ್ಣಕುಮಾರ್, ಎಸ್.ಡಿ.ದಿಲೀಪ್‍ಕುಮಾರ್, ಬಿ.ಹೆಚ್.ಅನಿಲ್‍ಕುಮಾರ್, ಎಲ್.ಸಿ.ನಾಗರಾಜು, ಬಿ.ಕೆ.ಮಂಜುನಾಥ್, ಸಿ.ಭಾರತಿ, ಚಂದ್ರಶೇಖರಬಾಬು, ಹೆಚ್.ಟಿ.ಭೈರಪ್ಪ, ಭೈರಣ್ಣ, ನಂದೀಶ್, ವಿವಿಧ ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *