
ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಅನೇಕ ಕಡೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಅದರಲ್ಲೂ, ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಉತ್ತರಕನ್ನಡದಲ್ಲಿ ಭಾರೀ ಮಳೆ ಹಿನ್ನಲೆ ಸೋಮವಾರ ಶಾಲೆ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕಾರವಾರ, ಕುಮಟ, ಹೊನ್ನಾವರ, ಭಟ್ಕಳ, ಯಲ್ಲಾಪುರ, ಸೇರಿ ಜಿಲ್ಲಾದ್ಯಂತ ಆಯಾ ಆಯಾ ತಾಲೂಕು ತಹಶಿಲ್ದಾರರು ರಜೆ ಘೋಷಣೆ ಮಾಡಲಾಗಿದೆ. ಬಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬಹುಪಾಲು ಜಲಾಶಯಗಳು ಭರ್ತಿಯಾಗಿವೆ. ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೋಮವಾರ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಕಳೆದ 4 ದಿನಗಳಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ. ಹಾಸನದಲ್ಲೂ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆ ರಜೆ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಜುಲೈ 24, 25ರಂದು ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಜುಲೈ 26ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲದೇ, ಬೆಳಗಾವಿ, ಹಾಸನ, ಹಾವೇರಿ ಬಳ್ಳಾರಿಯಲ್ಲೂ 24ರಿಂದ 28ರವರೆಗೆ ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯಪುರದಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.