ತುಮಕೂರು- ಜಿಲ್ಲೆಯಲ್ಲಿ 2024-25ನ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಇಂದಿನಿಂದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ತುಮಕೂರು ಶೈಕ್ಷಣಿಕ ಹಾಗ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಲಲಿತವಾಗಿ ನಡೆಯಿತು.
ಜಿಲ್ಲೆಯ ತುಮಕೂರು ಶೈಕ್ಷಣಿಕ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 35,636 ವಿದ್ಯಾರ್ಥಿಗಳು ಪರೀಕ್ಷೆಯನ್ನು ಸುಸೂತ್ರವಾಗಿ ಬರೆದಿದ್ದಾರೆ.
ತುಮಕೂರು (ದ) ಶೈಕ್ಷಣಿಕ ಜಿಲ್ಲೆಯಿಂದ 12,227 ವಿದ್ಯಾರ್ಥಿಗಳು, 10,246 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 22,473 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 6,897 ವಿದ್ಯಾರ್ಥಿಗಳು, 6,266 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 13,163 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಸೌಲಭ್ಯಗಳನ್ನು ಒದಗಿಸಲಾಗಿದೆ.
ಜಿಲ್ಲೆಯಲ್ಲಿ ತುಮಕೂರು (ದ) 80 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 49 ಸೇರಿ ಒಟ್ಟು 129 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಇಂದು ಬೆಳಿಗ್ಗೆ 8 ಗಂಟೆಯಿಂದಲೇ ವಿದ್ಯಾರ್ಥಿಗಳು ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳ ಮುಂದೆ ಜಮಾಯಿಸಿ ನೋಂದಣಿ ಸಂಖ್ಯೆ ಮತ್ತು ಕೊಠಡಿಗಳನ್ನು ಹುಡುಕಿಕೊಂಡು ಪರೀಕ್ಷೆ ಬರೆಯಲು ಉತ್ಸಾಹದಿಂದ ತೆರಳಿದ ದೃಶ್ಯಗಳು ಜಿಲ್ಲೆಯಾದ್ಯಂತ ಸಾಮಾನ್ಯವಾಗಿದ್ದವು.
ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳನ್ನು ಶಾಲಾ ಸಿಬ್ಬಂದಿಗಳು ತಪಾಸಣೆ ನಡೆಸಿ ಪರೀಕ್ಷಾ ಕೊಠಡಿಗಳಿಗೆ ಹೋಗಲು ಅನುಮತಿ ನೀಡುತ್ತಿದ್ದ ದೃಶ್ಯಗಳು ಕಂಡು ಬಂತು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷೆಗಳನ್ನು ವೀಕ್ಷಣೆ ಮಾಡಲು ವೆಬ್‍ಕಾಸ್ಟಿಂಗ್ ವ್ಯವಸ್ಥೆ ಸಹ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಡೆಸ್ಕ್, ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ವ್ಯವಸ್ಥೆ ಹಾಗೂ ವಿದ್ಯುತ್ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಸಿಇಓ ಜಿ. ಪ್ರಭು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.