ಹೇಮಾವತಿ ಯೋಜನೆ ವ್ಯಾಪ್ತಿಯ ಜಿಲ್ಲೆ ನಾಲೆಗಳಿಗೆ ಈಗಾಗಲೇ ನೀರು ಹರಿಯುತ್ತಿದ್ದು, ತುಮಕೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಬುಗುಡನಹಳ್ಳಿ ಕೆರೆಗೆ ಇಂದು ಬೆಳಿಗ್ಗೆ ೯ ಗಂಟೆಗೆ ಹೇಮಾವತಿ ನೀರು ತಲುಪಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿದ್ದಾರೆ.
ಪ್ರಸ್ತುತ ಕಡಿಮೆ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಯಾವುದೇ ಸಮಯದಲ್ಲಿ ನೀರಿನ ಒಳಹರಿವು ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಮೇಲೆ ಪೋಷಕರು ನಿಗಾವಹಿಸಬೇಕು. ಶಾಲೆ ಬಿಟ್ಟ ತಕ್ಷಣ ಮನೆ ಸೇರಬೇಕು. ನಾಲೆ ನೀರಿನಲ್ಲಿ ಈಜಲು ಹೋಗಬಾರದು. ನಾಲೆಯ ಬಳಿ ಸುಳಿದಾಡದಂತೆ ಎಚ್ಚರಿಕೆ ವಹಿಸಬೇಕೆಂದು ಶಾಲಾ ಮಕ್ಕಳಿಗೆ ತಿಳಿಹೇಳುವಂತೆ ಎಲ್ಲ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶಿಸಿದರು.
ಇಂದಿನ ವರದಿಯನುಸಾರ ತುಮಕೂರು ನಾಲಾ ವಲಯದಲ್ಲಿ ೧೧೫೦ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಗರಿಷ್ಠ ಪ್ರಮಾಣದ ನೀರನ್ನು ಕೆರೆ-ಕಟ್ಟೆಗಳಿಗೆ ಭರ್ತಿ ಮಾಡಲು ಕ್ರಮಕೈಗೊಳ್ಳಬೇಕು. ಕಳೆದ ವರ್ಷದಲ್ಲಿ ಜಿಲ್ಲೆಗೆ ಅಗತ್ಯವಿರುವ ನೀರು ಪಡೆಯಲು ಸಾಧ್ಯವಾಗದೆ ನೀರಿನ ಸಮಸ್ಯೆ ಎದುರಾಗಿತ್ತು. ಈ ವರ್ಷ ಜಿಲ್ಲೆಗೆ ನೀರಿನ ಸಮಸ್ಯೆ ಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.