ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಕೆಲದಿಂದಲೇ ವಜಾ-ತುಳಸಿ ಮದ್ದಿನೇನಿ

ತುಮಕೂರು : ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ವಿನಾಕಾರಣ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಬೇಕು, ಸ್ಪಂದಿಸದಿದ್ದರೆ ಅಮಾನತ್ತು, ನಂತರ ಕೆಲಸದಿಂದಲೇ ವಜಾಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾವಗಡ ಪಟ್ಟಣದ ಎಸ್‍ಎಸ್‍ಕೆ ರಂಗಮಂದಿರದಲ್ಲಿಂದು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಜನಸ್ಪಂದನ ಕಾರ್ಯಕ್ರಮವು ಕೇವಲ ವೇದಿಕೆ ಕಾರ್ಯಕ್ರಮಕ್ಕಷ್ಟೇ ಸೀಮಿತವಾಗಬಾರದು. ಜನರ ಅಹವಾಲುಗಳಿಗೆ ಪರಿಹಾರ ದೊರೆತಾಗ ಮಾತ್ರ ಜನಸ್ಪಂದನ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ ಎಂದು ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತ ಅಹವಾಲು ಅರ್ಜಿಗಳನ್ನು ಆದಷ್ಟು ಬೇಗ ಬಗೆಹರಿಸುವ ಮೂಲಕ ವಿಲೇವಾರಿ ಮಾಡಬೇಕು. ಕಾನೂನು ತೊಡಕು ಇರುವ ಅರ್ಜಿಗಳನ್ನು ಹೊರತುಪಡಿಸಿ ಉಳಿದ ಅರ್ಜಿಗಳನ್ನು ಬಾಕಿಯಿಟ್ಟುಕೊಳ್ಳಬಾರದೆಂದು ನಿರ್ದೇಶನ ನೀಡಿದರಲ್ಲದೆ ಸರ್ಕಾರಿ ಸೇವೆಯಲ್ಲಿ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿದಾಗ ಮಾತ್ರ ಜನರು ಸಮಸ್ಯೆಗಳಿಂದ ದೂರವಿರಲು ಸಾಧ್ಯ. ಆರೋಗ್ಯ ಸರಿಯಿಲ್ಲ, ಪ್ರಭಾರದಲ್ಲಿದ್ದೇನೆ ಎಂದು ಅಧಿಕಾರಿಗಳು ನೆಪ ಹೇಳದೆ ಸಮಯ ಬಿದ್ದಾಗ ಹಗಲಿರುಳು ಕೆಲಸ ಮಾಡಬೇಕೆಂದರಲ್ಲದೆ ಕರ್ತವ್ಯ ನಿರ್ಲಕ್ಷ್ಯತೆ ತೋರುವ ಅಧಿಕಾರಿಗಳನ್ನು ಅಮಾನತ್ತಿನಲ್ಲಿಡುವುದು ಮೊದಲ ಎಚ್ಚರಿಕೆ ಸಂದೇಶ. ಆದರೂ ಅಧಿಕಾರಿಗಳು ತಮ್ಮ ನಡೆಯನ್ನು ಸುಧಾರಿಸಿಕೊಳ್ಳದಿದ್ದರೆ ನೇರವಾಗಿ ಸೇವೆಯಿಂದ ವಜಾಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ ಜನಸ್ಪಂದನ ಕಾರ್ಯಕ್ರಮವು ಹೆಸರಿಗಷ್ಟೆ ನಡೆಯಬಾರದು. ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸಿ ಪರಿಹರಿಸಿದಾಗ ಮಾತ್ರ ಜನಸ್ಪಂದನ ಕಾರ್ಯಕ್ರಮ ಸಾರ್ಥಕವಾಗುತ್ತದೆ. ಸಾರ್ವಜನಿಕರ ಸಮಸ್ಯೆಗಳನ್ನು ನಿಗಧಿತ ಅವಧಿಯೊಳಗೆ ಪರಿಹರಿಸುವುದೇ ಜನಸ್ಪಂದನಾ ಕಾರ್ಯಕ್ರಮದ ಉದ್ದೇಶ. ಉದ್ದೇಶ ಕಾರ್ಯಗತವಾಗದಿದ್ದಲ್ಲಿ ಇಂತಹ 100 ಕಾರ್ಯಕ್ರಮಗಳನ್ನು ಏರ್ಪಡಿಸಿದರೂ ಯಾವುದೇ ಪ್ರಯೋಜನವಿಲ್ಲವೆಂದರು.

ಈ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಅಹವಾಲು ಅರ್ಜಿಗಳಿಗೆ ಹಿಂಬರಹ ನೀಡಿ ಸುಮ್ಮನೆ ಕೂರದೆ ಶೇ.100ರಷ್ಟು ವಿಲೇವಾರಿ ಮಾಡಬೇಕು. ಲೋಕಸಭಾ ಚುನಾವಣೆಗೂ ಮುನ್ನ ಪಾವಗಡ ತಾಲೂಕಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಳೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ್ದ ಸಾರ್ವಜನಿಕರ ಅಹವಾಲುಗಳು ಬಾಕಿಯಿದ್ದಲ್ಲಿ ಆದ್ಯತೆ ಮೇಲೆ ವಿಲೇವಾರಿ ಮಾಡಬೇಕು ಎಂದು ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಧಿಕಾರಿಗಳು ಜನರ ಸಮಸ್ಯೆಗಳ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು. ಸರ್ಕಾರದ ನಿರ್ದೇಶನಗಳನ್ನು ಪಾಲಿಸದೆ ಇರುವ ಅಧಿಕಾರಿಗಳು ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಬೇಕು. ರಾಜ್ಯದ ಅಭಿವೃದ್ಧಿ ನಿಟ್ಟಿನಲ್ಲಿ ಬೇಕಾಬಿಟ್ಟಿ ಕೆಲಸ ಮಾಡುವ ಅಧಿಕಾರಿಗಳನ್ನು ಮುಲಾಜಿಲ್ಲದೆ ಸೇವೆಯಿಂದ ವಜಾ ಮಾಡಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಮಂತ್ರಿಗಳು ನಡೆಸಿದ ಸಭೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖಾಧಿಕಾರಿಗಳು ಸರ್ಕಾರದ ಆಶೋತ್ತರಗಳಂತೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡಬೇಕೆಂದು ಎಚ್ಚರಿಕೆ ನೀಡಿದರು.

ಸಕಾಲ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪೌತಿ ಖಾತೆ, 3& 9 ವ್ಯತ್ಯಾಸ, ಮತ್ತಿತರ ಕಂದಾಯ ವಿಷಯಗಳಡಿ ಸೌಲಭ್ಯ ಕೋರಿ ಬಂದ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡದೆ ಬಾಕಿ ಉಳಿಸಿಕೊಂಡು ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸುವ ಅಧಿಕಾರಿ, ನೌಕರರು ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ ಶಾಲೆ, ಕಾಲೇಜು ವಿದ್ಯಾರ್ಥಿ ನಿಲಯಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಪರಿಶೀಲಿಸಬೇಕು. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ ಉತ್ತಮ ಫಲಿತಾಂಶಕ್ಕೆ ಶ್ರಮಿಸಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು. 

ಜಿಲ್ಲೆ ಸೇರಿದಂತೆ ಪಾವಗಡ ತಾಲ್ಲೂಕಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ತಾಲೂಕಿನ ವಾಡಿಕೆ ಮಳೆ 126 ಮಿ.ಮೀ. ಇದ್ದು, ಈ ಬಾರಿ 172 ಮಿ.ಮೀ. ವಾಸ್ತವಿಕ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿವೆ. ತಾಲ್ಲೂಕಿನಲ್ಲಿ ಶೇಂಗಾ ಹಾಗೂ ರಾಗಿ ಬಿತ್ತನೆ ಬೀಜಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಅಗತ್ಯಕ್ಕನುಗುಣವಾಗಿ ರಿಯಾಯತಿ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ. ರೈತ ಬಾಂಧವರು ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.

ರೈತರ ಜಮೀನುಗಳಿಗೆ ಭೇಟಿ ನೀಡಿ ಬಿತ್ತನೆ ಬೀಜ ವಿತರಣೆಯಾಗಿರುವ ಬಗ್ಗೆ ರೈತರಿಂದ ಮಾಹಿತಿ ಪಡೆಯಬೇಕು. ಕೊರತೆಯಿದ್ದಲ್ಲಿ ಕೂಡಲೇ ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಕೃಷಿ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳ ದಾಸ್ತಾನು ಹಾಗೂ ವ್ಯತ್ಯಾಸಗಳುಂಟಾದಲ್ಲಿ ರೈತರು ನೇರವಾಗಿ ತಮಗೆ ಮಾಹಿತಿ ನೀಡಬೇಕೆಂದು ತಿಳಿಸಿದರು.

ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್ ಮಾತನಾಡಿ ಪಾವಗಡ ತಾಲೂಕಿನಲ್ಲಿರುವ ನಾಗಲಮಡಿಕೆ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮನವಿ ಮಾಡಿದರು.

ಸವಲತ್ತು ಕೋರಿ ಬರುವ ತಾಲ್ಲೂಕಿನ ರೈತರನ್ನು ಅಧಿಕಾರಿಗಳು ಕಚೇರಿಗಳಿಗೆ ಅಲೆದಾಡಿಸುತ್ತಿದ್ದಾರೆ. ಕೂಲಿ -ನಾಲಿ ಮಾಡುವ ಜನರು ಕೂಲಿ ಕೆಲಸ ಬಿಟ್ಟು ಬಂದರೆ ಅವರ ಒಂದು ದಿನದ ಕೂಲಿ ನಷ್ಟವಾಗುತ್ತದೆ. ಅಧಿಕಾರಿಗಳು ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಆದ್ಯತೆ ಮೇಲೆ ಬಡವರ ಕೆಲಸಗಳನ್ನು ಮಾಡಿಕೊಡಬೇಕು. ಗ್ರಾಮ ಪಂಚಾಯತಿ ಪಿಡಿಓಗಳು ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಪಿಡಿಓಗಳು ಹಾಗೂ ಕಂದಾಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಾರ್ವಜನಿಕರಿಂದ ದೂರುಗಳು ಬರುವುದು ನಿಲ್ಲುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿದರು.

Leave a Reply

Your email address will not be published. Required fields are marked *