ತುಮಕೂರಿಗೆ ಜ.29 ಮುಖ್ಯಮಂತ್ರಿ, 1000 ಕೋಟಿ ರೂ. ವೆಚ್ಚದ ಕಾಮಗಾರಿಗಳ ಕೊಡುಗೆ

ತುಮಕೂರು : ಜಿಲ್ಲೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2024 ಜನವರಿ 29ರ ಸೋಮವಾರದಂದು ಜಿಲ್ಲೆಗೆ ಭೇಟಿ ನೀಡಿ ಸುಮಾರು 1000 ಕೋಟಿ ರೂ. ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ.

ಇದು ಜಿಲ್ಲೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಎರಡನೇ ಭೇಟಿಯಾಗಿದೆ, ಮೊದಲ ಭೇಟಿ ಮಧುಗಿರಿಯಲ್ಲಿ ಶಾಲಾ ಮಕ್ಕಳಿಗೆ ಕ್ಷೀರ ಯೋಜನೆಗೆ 10 ವರ್ಷ ತುಂಬಿದ ಹಿನ್ನಲೆಯಲ್ಲಿ ರಾಜ್ಯ ಮಟ್ಟದ ಸಮಾರಂಭವನ್ನು ನಡೆಸಲಾಗಿತ್ತು.

ಮುಖ್ಯಮಂತ್ರಿಗಳು ಶಂಕುಸ್ಥಾಪನೆ-ಶಿಲಾನ್ಯಾಸ-ಗುದ್ದಲಿಪೂಜೆಯನ್ನು ನೆರವೇರಿಸಲಿದ್ದು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಪೂರ್ವಭಾವಿ ಸಭೆ ನಡೆಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ ಅವರು ಡಿಸೆಂಬರ್ 29ರಂದು ಮುಖ್ಯಮಂತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಿದ್ದು, ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿ ವಿವರವನ್ನು ತಪ್ಪದೇ ಈ ಸಭೆಗೆ ತರಬೇಕೆಂದು ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಸ್ಥಿತಿ-ಗತಿ ಬಗ್ಗೆ ಮಾಹಿತಿ ಒದಗಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್ ಅವರಿಗೆ ಸೂಚಿಸಿದಾಗ, ಉತ್ತರಿಸಿದ ಅವರು ಜಿಲ್ಲೆಯ ಕುಣಿಗಲ್, ತುಮಕೂರು, ತುರುವೇಕೆರೆ ತಾಲೂಕು ಸೇರಿದಂತೆ ತಲಾ 1ರಂತೆ ಒಟ್ಟು 3 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಸರ್ಕಾರದಿಂದ ಪ್ರತಿ ದಿನ ಜಿಲ್ಲೆಯಲ್ಲಿ 150 ಕೋವಿಡ್ ಪರೀಕ್ಷೆ ನಡೆಸಲು ಗುರಿ ನೀಡಲಾಗಿದ್ದು, ಅದರಂತೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೋವಿಡ್ ಪರೀಕ್ಷೆಯನ್ನು 150 ರಿಂದ 200ಕ್ಕೆ ಹೆಚ್ಚಿಸಬೇಕು. ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಾಥಮಿಕ/ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಎಎಂಓಗಳೊಂದಿಗೆ ಪ್ರತಿ ದಿನ ಸಂಜೆ ಸಭೆ ನಡೆಸಿ ತಮಗೆ ಮಾಹಿತಿ ನೀಡಬೇಕೆಂದು ನಿರ್ದೇಶನ ನೀಡಿದರಲ್ಲದೆ, ಆರ್‍ಟಿಪಿಸಿಆರ್ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್ ನಿಯಂತ್ರಿಸಲು ಶುಶ್ರೂಷಕಿಯರಿಗೆ ಮತ್ತೊಂದು ಸುತ್ತಿನ ತರಬೇತಿ ನೀಡಬೇಕು. ಜಿಲ್ಲೆಯಲ್ಲಿರುವ ಆಕ್ಸಿಜûನ್ ಪ್ಲಾಂಟ್‍ಗಳು ಸುಸ್ಥಿತಿಯಲ್ಲಿರುವಂತೆ ಎಚ್ಚರಿಕೆ ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಆಕ್ಸಿಜûನ್ ಪ್ಲಾಂಟ್ ದುರಸ್ತಿಯಲ್ಲಿದೆ ಎಂದು ನೆಪ ಹೇಳಿದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಭವಿಸುವ ಯಾವುದೇ ಘಟನೆ/ಪ್ರಕರಣಗಳು ತಾಲ್ಲೂಕು/ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ಬರುವುದೇ ಇಲ್ಲ. ಸಾರ್ವಜನಿಕ ಹಿತಾಸಕ್ತಿಗಳಿಗೆ ವಿರುದ್ಧವಾದ ಘಟನೆಗಳು ನಡೆದಲ್ಲಿ ಸ್ಥಳೀಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಮೇಲಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸಂಬಂಧಿಸಿದ ಅಧಿಕಾರಿಗಳನ್ನು ಹೊರತುಪಡಿಸಿ ಮೂರನೆಯವರಿಂದ ಇಂತಹ ಘಟನೆಗಳು ನಡೆದ ಬಗ್ಗೆ ತಮ್ಮ ಗಮನಕ್ಕೆ ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರಲ್ಲದೆ ಜನರ ತೆರಿಗೆ ಹಣವನ್ನು ವೇತನವಾಗಿ ಪಡೆಯುತ್ತಿರುವ ಅಧಿಕಾರಿಗಳು ಜನರ ಅನುಕೂಲಕ್ಕಾಗಿ ಸೇವೆ ಸಲ್ಲಿಸಬೇಕೆಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು ಮಾತನಾಡಿ, ಕೋವಿಡ್ ಪರಿಸ್ಥಿತಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪ್ರತಿದಿನ ಕೋವಿಡ್ ಕಾರ್ಯಪಡೆ ಸಮಿತಿ ಸಭೆ ನಡೆಸಿ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಮುಂದಿನ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ನಿರ್ವಹಣೆ ಮಾಡಬೇಕು. ಜಾನುವಾರು ಮೇವು ದಾಸ್ತಾನು ಪ್ರಮಾಣ, ಮೇವಿನ ಕೊರತೆ, ರೈತರಿಗೆ ವಿತರಿಸಲಾದ ಮೇವಿನ ಬೀಜದ ಕಿರುಪೊಟ್ಟಣ, ಕಿರುಪೊಟ್ಟಣಗಳ ಬೇಡಿಕೆ ಪ್ರಮಾಣದ ವಿವರಗಳನ್ನು ಅಧಿಕಾರಿಗಳಿಂದ ಪಡೆದ ಅವರು ಮೇವಿನ ಬೀಜ ಪಡೆದು ಮೇವು ಉತ್ಪಾದನೆ ಮಾಡುತ್ತಿರುವ ರೈತರ ವಿವರವನ್ನು ಛಾಯಾಚಿತ್ರ ಸಹಿತ ಸ್ಪ್ರೆಡ್‍ಶೀಟ್‍ಗೆ ಅಪ್‍ಲೋಡ್ ಮಾಡಬೇಕೆಂದು ಅವರು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಮಹಾನಗರಪಾಲಿಕೆ ಆಯುಕ್ತೆ ಅಶ್ವಿಜ ಬಿ.ವಿ. ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *