ಕರವೇ ಕಾರ್ಯಕರ್ತರಿಂದ ಡಿಸಿ ಕಚೇರಿ ಬಳಿ ಪ್ರತಿಭಟನೆ

ತುಮಕೂರು: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಸಂಘಟನೆ ಮುಖಂಡರು ಒತ್ತಾಯಿಸಿ ತಹಶೀಲ್ದಾರ್ ರಾಜೇಶ್ವರಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು.

ಇದಕ್ಕೂ ಮೊದಲು ಪ್ರತಿಭಟನೆಯಲ್ಲಿ ಮಾತನಾಡಿದ ರಕ್ಷಣಾ ವೇದಿಕೆಯ ಅಧ್ಯಕ್ಷ ಅರುಣ್‍ಕುಮಾರ್, ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಉಪಟಳ ಹೆಚ್ಚಾಗಿದೆ. ಕನ್ನಡಿಗರ ಮೇಲೆ ಹಲ್ಲೆ ಮಾಡುವುದು, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವಂತಹ ಕೃತ್ಯ ನಡೆಸುತ್ತಿದ್ದಾರೆ. ಸರ್ಕಾರ ಇವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಸಂಘಟನೆಯನ್ನು ನಿಷೇಧಿಸಿ ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಕನ್ನಡ ನೆಲ, ಜನ, ಭಾಷೆ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಬೇಕು, ಇದರ ವಿರುದ್ಧ ಧ್ವನಿ ಮಾಡುವವರನ್ನು ಮಟ್ಟಹಾಕಬೇಕು. ಬೆಳಗಾವಿ ಗಡಿ ಭಾಗದಲ್ಲಿ ಎಂಇಎಸ್ ಪುಂಡರು ಕೆಎಸ್‍ಆರ್‍ಟಿಸಿ ಬಸ್ ಹಾಗೂ ಸಿಬ್ಬಂದಿ ಮೇಲೆ ದಾಳಿ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಕೃತ್ಯಗಳ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಕನ್ನಡಿಗರ ಹಿತ ಕಾಯುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಳಸ, ಬಂಡೂರಿ, ಮೇಕೆದಾಟು ಯೋಜನೆಗಳನ್ನು ಸರ್ಕಾರ ಅನುಷ್ಠಾನ ಮಾಡಬೇಕು ಎಂದು ಅರುಣ್‍ಕುಮಾರ್ ಆಗ್ರಹಿಸಿದರು.

ಸಂಘಟನೆಯ ಮುಖಂಡರಾದ ಹೆಚ್.ದೇವರಾಜು, ಇಬ್ರಾಹಿಂ, ಮೋಹನ್, ಕೆಂಪೇಗೌಡ, ಆರ್.ಎಲ್.ರಮೇಶ್, ರಾಜು, ಸಿದ್ದಿಕ್ ಖಾನ್, ಶ್ರೀನಿವಾಸಮೂರ್ತಿ, ಮಹ್ಮದ್ ಸುತ್ತಾನ್, ಅರ್ಷದ್ ಷರೀಫ್, ಮಹದೇವಯ್ಯ, ರೇಖಾ, ಪವಿತ್ರ, ಹಸನ್ ಅಹ್ಮದ್, ಯತೀಶ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *