
ತುಮಕೂರು : ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ಗ್ರೂಪ್ ‘ಸಿ’ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ತುಮಕೂರು ನಗರದ 1 ಪರೀಕ್ಷಾ ಕೇಂದ್ರದಲ್ಲಿ ಡಿಸೆಂಬರ್ 16ರಂದು ಹಾಗೂ ತುಮಕೂರು ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 17ರಂದು ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋóಷವಿಲ್ಲದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿಸಿದ್ದಾರೆ.
ನಿಷೇಧಾಜ್ಞೆಯು ಡಿಸೆಂಬರ್ 16ರಂದು ಮಧ್ಯಾಹ್ನ 1.30 ರಿಂದ ಸಂಜೆ 4-30 ಗಂಟೆಯವರೆಗೆ ಹಾಗೂ ಡಿಸೆಂಬರ್ 17 ರಂದು ಬೆಳಿಗ್ಗೆ 9.30 ರಿಂದ ಸಂಜೆ 4.30ರವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆಯು ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತಗೆದು ವಾಟ್ಸ್‍ಆಫ್ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಠಿ ಮಾಡಲು ಅವಕಾಶವಿರುವುದರಿಂದ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಕ್ಯಾಮರಾ ಇಲ್ಲದೇ ಇರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ-ವಿದ್ಯಾರ್ಥಿಗಳು ಮೊಬೈಲ್ ತರುವುದು-ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.