ಮಾ. 1 ರಿಂದ ಪಿಯು ಪರೀಕ್ಷೆ : ಲೋಪವಿಲ್ಲದಂತೆ ನಡೆಸಲು ಸೂಚನೆ

ತುಮಕೂರು : ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ದ್ವಿತೀಯ ಪಿಯುಸಿ ಸಭೆ ನಡೆಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ಪಾರದರ್ಶಕವಾಗಿ ನಡೆಸಬೇಕು ಎಂದು ಸೂಚಿಸಿದರು. 

ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 13; ಕೊರಟಗೆರೆ ತಾಲ್ಲೂಕಿನಲ್ಲಿ 1; ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ ತಾಲ್ಲೂಕಿನಲ್ಲಿ ತಲಾ 2; ಕುಣಿಗಲ್, ತಿಪಟೂರು, ಪಾವಗಡ ತಾಲ್ಲೂಕಿನಲ್ಲಿ ತಲಾ 3; ಶಿರಾ ತಾಲ್ಲೂಕಿನಲ್ಲಿ 4 ಸೇರಿ ಒಟ್ಟು 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಈಗಾಗಲೇ ಸಿಸಿ ಕ್ಯಾಮೆರಾ ಅಳವಡಿಸಿದ್ದಲ್ಲಿ ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪ್ರಶ್ನೆಪತ್ರಿಕೆಗಳನ್ನು ಠೇವಣಿಸುವ ತುಮಕೂರು ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದರಲ್ಲದೆ, ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳ ಸಾಗಾಣಿಕೆ ಮಾಡುವ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಬೇಕು. ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಾಕಷ್ಟು ಗಾಳಿ, ಬೆಳಕು ಇರುವ ಕೊಠಡಿಗಳನ್ನು ಉಪಯೋಗಿಸಬೇಕು.  ಉತ್ತಮ ರೀತಿಯ ಪೀಠೋಪಕರಣ ವ್ಯವಸ್ಥೆ ಮಾಡಬೇಕು.  ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಇರುವ ಬಗ್ಗೆ ಪರಿಶೀಲಿಸಬೇಕು ಎಂದು ಸೂಚಿಸಿದರು. 

ನಿಯೋಜಿಸಿರುವ ಮಾರ್ಗಾಧಿಕಾರಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಿದರು. ಪರೀಕ್ಷಾ ಅಕ್ರಮವನ್ನು ತಡೆಯಲು ಮುಖ್ಯ ಅಧೀಕ್ಷಕರನ್ನು ಹಾಗೂ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಹಾಯಕರನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನೇಮಿಸಲು ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಗಂಗಾಧರ್ ಅವರಿಗೆ ನಿರ್ದೇಶನ ನೀಡಿದರು. 

ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಬಾಲ ಗುರುಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 24,378 ಹೊಸ ವಿದ್ಯಾರ್ಥಿಗಳು, 318 ಪುನರಾವರ್ತಿತ, 1067 ಖಾಸಗಿ ಹಾಗೂ 5 ಫಲಿತಾಂಶ ಸುಧಾರಣೆ ವಿದ್ಯಾರ್ಥಿಗಳು ಸೇರಿ  ಒಟ್ಟು 25,768 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.  ಈ ಪೈಕಿ 9088 ವಿಜ್ಞಾನ, 10217 ವಾಣಿಜ್ಯ ಹಾಗೂ 5977 ಕಲಾ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಠೇವಣಿಸಲು ಹಾಗೂ ವಿತರಿಸಲು ಅಪರ ಜಿಲ್ಲಾಧಿಕಾರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಜಿಲ್ಲಾ ಖಜಾನೆ ಉಪನಿರ್ದೇಶಕರನ್ನೊಳಗೊಂಡ ತ್ರಿಸದಸ್ಯ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಉಮಾ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮೋಹನ್ ಕುಮಾರ್, ವಿವಿಧ ತಾಲ್ಲೂಕಿನ ತಹಶೀಲ್ದಾರರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷಾ ಕೇಂದ್ರಗಳಿಗೆ ನೇಮಿಸಿರುವ ಮುಖ್ಯಸ್ಥರು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *