ತುಮಕೂರು : ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ನವೆಂಬರ್ 3 ರಿಂದ ಡಿಸೆಂಬರ್ 2ರವರೆಗೆ 8ನೇ ಸುತ್ತಿನ ಕಾಲುಬಾಯಿ ಜ್ವರದ ವಿರುದ್ಧದ ಸಾಮೂಹಿಕ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಅಭಿಯಾನದಲ್ಲಿ ಪ್ರತಿಯೊಂದು ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಬೇಕು. ಲಸಿಕಾ ಕರ್ತವ್ಯದಲ್ಲಿ ಯಾವುದೇ ರೀತಿಯ ಅಸಡ್ಡೆ ಅಥವಾ ನಿರ್ಲಕ್ಷ್ಯ ತೋರದೇ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ಸೂಚನೆ ನೀಡಿದರು.
ಕಾಲುಬಾಯಿ ಜ್ವರದಂತಹ ಸಾಂಕ್ರಾಮಿಕ ರೋಗದಿಂದ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ಪಶುಪಾಲಕರಲ್ಲಿ ಅರಿವು ಮೂಡಿಸಬೇಕು. ಅಭಿಯಾನ ಪ್ರಗತಿ ಕುರಿತು ಎಷ್ಟು ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ ಎಂಬ ವಿವರವನ್ನು ಅಧಿಕಾರಿಗಳು ಪ್ರತಿದಿನ ಸಲ್ಲಿಸಬೇಕು ಎಂದು ಸೂಚಿಸಿದರು.
ಸ್ಥಳೀಯ ಗ್ರಾಮ ಪಂಚಾಯಿತಿಗಳು ಈ ಅಭಿಯಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು. ಹಾಲಿನ ಡೈರಿ ಮತ್ತು ಪಶುಪಾಲನಾ ಕೇಂದ್ರಗಳ ಮುಂದೆ ಅಭಿಯಾನದ ಪೆÇೀಸ್ಟರ್‍ಗಳನ್ನು ಅಳವಡಿಸಿ ಪಶುಪಾಲಕರಿಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ: ಶಿವಪ್ರಸಾದ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 4 ಲಕ್ಷಕ್ಕೂ ಹೆಚ್ಚು ಜಾನುವಾರುಗಳಿದ್ದು, ಪಶುಪಾಲನಾ ಇಲಾಖೆಯ 554 ಪಶುವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಮನೆ-ಮನೆಗೆ ಭೇಟಿ ನೀಡಿ ಉಚಿತವಾಗಿ ಲಸಿಕೆ ನೀಡಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧಿಕಾರಿಗಳು ಹಾಗೂ ವಿವಿಧ ತಾಲ್ಲೂಕು ಪಶುವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಪೆÇೀಸ್ಟರ್ ಬಿಡುಗಡೆ ಮಾಡಲಾಯಿತು.