ಜಿಲ್ಲೆಯಲ್ಲಿ 2022ರಿಂದ ಮಲೇರಿಯಾ ಪ್ರಕರಣ ವರದಿಯಾಗಿಲ್ಲ – ಡಾ|| ಚಂದ್ರಶೇಖರ್

ತುಮಕೂರು : ಜಿಲ್ಲೆಯಲ್ಲಿ ಜನವರಿ 2022ರಿಂದ ಈವರೆಗೂ ಯಾವುದೇ ಸ್ಥಳೀಯ ಮಲೇರಿಯಾ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್ ತಿಳಿಸಿದರು.

ವಿಶ್ವ ಮಲೇರಿಯ ದಿನಾಚರಣೆ ಅಂಗವಾಗಿ ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರಿತ ರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮಲೇರಿಯಾ ರೋಗವನ್ನು 2027ಕ್ಕೆ ನಿವಾರಣೆ ಮಾಡುವ ಗುರಿ ಹೊಂದಲಾಗಿದ್ದು, ಜಿಲ್ಲೆಯು ಈಗಾಗಲೇ ಮಲೇರಿಯಾ ನಿವಾರಣಾ ಗುರಿ ತಲುಪಿದೆ ಎಂದು ತಿಳಿಸಿದರು.

ಮಲೇರಿಯಾ ನಮ್ಮೊಂದಿಗೆ ಕೊನೆಗೊಳ್ಳುತ್ತದೆ, ಮರು ಹೂಡಿಕೆ ಮಾಡಿ, ಮರು ಕಲ್ಪನೆ ಮಾಡಿ, ಮರು ಉತ್ತೇಜನ ನೀಡೋಣ ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ವಿಶ್ವ ಮಲೇರಿಯಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಲೇರಿಯಾ ರೋಗಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 2024ರಲ್ಲಿ ಜ್ವರ ಪೀಡಿತರಿಂದ 9,24,124 ರಕ್ತ ಲೇಪನಗಳನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ 17 ಮಲೇರಿಯಾ ಪ್ರಕರಣಗಳು ದೃಢಪಟ್ಟಿದ್ದು, ದೃಢಪಟ್ಟ ಎಲ್ಲಾ ಪ್ರಕರಣಗಳು ಹೊರ ರಾಜ್ಯ ಪ್ರಕರಣಗಳಾಗಿವೆ. ಕಳೆದ ಜನವರಿ 2025 ರಿಂದ ಈವರೆಗೆ 2,30,049 ರಕ್ತ ಲೇಪನಗಳನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದ್ದು, ಈ ಪೈಕಿ ಯಾವುದೇ ಮಲೇರಿಯಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ಜ್ವರವಿರಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ರಕ್ತ ಪರೀಕ್ಷೆಯಲ್ಲಿ ಮಲೇರಿಯಾ ದೃಢಪಟ್ಟಲ್ಲಿ ನಿರ್ಧಿಷ್ಟ ಚಿಕತ್ಸೆ ತೆಗೆದುಕೊಳ್ಳಬೇಕು. ಇಲಾಖೆಯಿಂದ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರಲ್ಲದೆ, ಮಲೇರಿಯಾ ಬರದಂತೆ ತಡೆಗಟ್ಟಲು ಸೊಳ್ಳೆ ಪರದೆ ಬಳಕೆ ಮಾಡಬೇಕು. ಮನೆಯ ಕಿಟಕಿ, ಬಾಗಿಲುಗಳಿಗೆ ಸೊಳ್ಳೆನಿರೋಧಕ ಜಾಲರಿಯನ್ನು ಅಳವಡಿಸಿಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ಮಲೇರಿಯಾ ನಿಯಂತ್ರಿಸುವ ನಿಟ್ಟಿನಲ್ಲಿ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಅತ್ಯಗತ್ಯವಾಗಿದೆ ಹಾಗೂ ಮನೆಗಳಲ್ಲಿ ಶೇಖರಿಸುವ ನೀರಿನ ತೊಟ್ಟಿಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವ ಮೂಲಕ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸುವಲ್ಲಿ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ|| ರಂಗನಾಥ ಮಾತನಾಡಿ, ಸೊಳ್ಳೆಗಳನ್ನು ನಿಯಂತ್ರಿಸಲು ಇಲಾಖಾ ವತಿಯಿಂದ ನೀರಿನ ತಾಣಗಳಾದ ಬಾವಿ, ಕೆರೆ-ಕಟ್ಟೆ, ಹಳ್ಳ, ಕುಂಟೆ, ಕಲ್ಯಾಣಿಗಳಿಗೆ ಸೊಳ್ಳೆ ಮರಿಗಳನ್ನು ತಿನ್ನುವಂತಹ ಗಪ್ಪಿ ಹಾಗೂ ಗ್ಯಾಂಬೂಸಿಯಾ ಲಾರ್ವಾಹಾರಿ ಮೀನುಗಳನ್ನು ಬಿಡಲಾಗುತ್ತಿದೆ. ಸಾರ್ವಜನಿಕರೂ ಸಹ ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸುವ ಮೂಲಕ ಮಲೇರಿಯಾ ಹರಡದಂತೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ಆವರಣದಿಂದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿವರೆಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ|| ಲಕ್ಷ್ಮಿಕಾಂತ್, ನಸಿರ್ಂಗ್ ವಿದ್ಯಾರ್ಥಿಗಳು ಹಾಗೂ ಪ್ರಾಂಶುಪಾಲರು, ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿ/ಸಿಬ್ಬಂದಿ ಹಾಜರಿದ್ದರು.

Leave a Reply

Your email address will not be published. Required fields are marked *