ತುಮಕೂರು : ಕುಡಿಯುವ ಉದ್ದೇಶಕ್ಕಾಗಿ ಕೆರೆಗಳನ್ನು ತುಂಬಿಸಲು ಹೇಮಾವತಿ ನಾಲೆ ನೀರನ್ನು ಜಿಲ್ಲೆಗೆ ಹರಿಸಿದ್ದು, ನಾಲೆ ನೀರನ್ನು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ಜಿಲ್ಲೆಯಲ್ಲಿ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತು ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಹೇಮಾವತಿ ನಾಲೆ ನೀರನ್ನು ಅಕ್ರಮವಾಗಿ ಡಿಸೇಲ್ ಪಂಪ್ನಿಂದ ಬಳಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಕ್ರಮವಾಗಿ ಬಳಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಕುಡಿಯುವ ನೀರಿಗಾಗಿ ಮಾತ್ರ ನಾಲೆ ನೀರನ್ನು ಬಳಸಿಕೊಳ್ಳಬೇಕು. ಕೃಷಿ ಮತ್ತಿತರ ಚಟುವಟಿಕೆಗಳಿಗೆ ಅಕ್ರಮವಾಗಿ ಬಳಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರಲ್ಲದೆ ನಾಲೆ ನೀರನ್ನು ಶುದ್ಧೀಕರಿಸಿದ ನಂತರ ಜನರಿಗೆ ಪೂರೈಕೆ ಮಾಡುವ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿ ಕುಡಿಯಲು ಯೋಗ್ಯವಿದ್ದರೆ ಮಾತ್ರ ಪೂರೈಕೆ ಮಾಡಬೇಕೆಂದು ನಿರ್ದೇಶನ ನೀಡಿದರು.
ದಿನೇ ದಿನೇ ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮಾನವೀಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆ ತೋರದಂತೆ ಕ್ರಮಕೈಗೊಳ್ಳಬೇಕು. ಚುನಾವಣಾ ಕರ್ತವ್ಯದೊಂದಿಗೆ ಬರ ಪರಿಸ್ಥಿತಿಯನ್ನೂ ಸಹ ನಿರ್ವಹಿಸಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಆಯಾ ಉಪ ವಿಭಾಗಾಧಿಕಾರಿಗಳು ತಮ್ಮ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಕಡ್ಡಾಯವಾಗಿ ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆಯನ್ನು ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.
ಬೇಸಿಗೆ ಮುಗಿಯುವವರೆಗೂ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಅಂದಾಜು ಪಟ್ಟಿ ಸಿದ್ಧಪಡಿಸಬೇಕು. ತೀವ್ರತರ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಕೂಡಲೇ ಹೊಸ ಕೊಳವೆ ಬಾವಿ ಕೊರೆಸಲು ಮುಂದಾಗಬೇಕು. ಹೊಸದಾಗಿ ಕೊರೆದ ಕೊಳವೆಬಾವಿಗಳನ್ನು ಹಾಗೆ ಬಿಡದೆ ತತ್ಕ್ಷಣವೇ ವಿದ್ಯುದ್ದೀಕರಣಗೊಳಿಸಿ ಪಂಪು-ಮೋಟಾರು, ಪೈಪ್ಲೈನ್ ಅಳವಡಿಸಬೇಕು. ಸಂಬಂಧಿಸಿದ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಹಾಗೂ ಜಾನುವಾರು ಮೇವಿನ ಸಮಸ್ಯಾತ್ಮಕ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.