ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್

ತುಮಕೂರು : ಜಿಲ್ಲೆಯಾದ್ಯಂತ ನಡೆಯುತ್ತಿರುವ ಮೇ 5 ರಿಂದ ಪರಿಶಿಷ್ಟ ಜಾತಿಯ ಉಪಜಾತಿಗಳ ಸಮಗ್ರ ಸಮೀಕ್ಷಾ ಕಾರ್ಯವು ಕೆಲ ತಾಲೂಕುಗಳಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ನಿರೀಕ್ಷಿತ ಮಟ್ಟದಲ್ಲಿ ಸಮೀಕ್ಷಾ ಕಾರ್ಯ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯಕ್ಕೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಡಿಡಿಪಿಐಗಳಿಗೆ ಖಡಕ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಗ್ರ ಪರಿಶಿಷ್ಟ ಜಾತಿ ಉಪಜಾತಿಯ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಗಣತಿದಾರರು ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಸಮೀಕ್ಷೆಯನ್ನು ನಡೆಸಬೇಕು. ನೋಡಲ್ ಅಧಿಕಾರಿಗಳು ಪ್ರತಿ ದಿನ ಸಮೀಕ್ಷೆ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿದಿನ ಗಣತಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಗಣತಿದಾರರಿಗೆ ಮಾರ್ಗದರ್ಶನ ನೀಡಬೇಕು ಎಂದು ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ ಸಮೀಕ್ಷೆಯನ್ನು ಯಾವುದೇ ಗೊಂದಲಗಳುಂಟಾಗದಂತೆ ನಡೆಸಿ ನೈಜ ಮಾಹಿತಿಯನ್ನು ಸಂಗ್ರಹಿಸಬೇಕು. ನೆಟ್ವರ್ಕ್ ಸಮಸ್ಯೆ ಹಾಗೂ ತಾಂತ್ರಿಕ ಅಡಚಣೆಗಳಿಂದಾಗಿ ಸಮೀಕ್ಷೆ ವಿಳಂಬವಾಗುತ್ತಿರುವ ಬಗ್ಗೆ ನೋಡಲ್ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಸಮೀಕ್ಷಾ ಆ್ಯಪ್ ಅನ್ನು ಈಗ ಅಪ್‍ಗ್ರೇಡ್ ಮಾಡಲಾಗಿದ್ದು, ಗಣತಿದಾರರು ಈ ಆ್ಯಪ್‍ನಲ್ಲಿ ಸುಲಭವಾಗಿ ಕಾರ್ಯ ನಿರ್ವಹಿಸಬಹುದಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ಬಿ.ವಿ. ಆಶ್ವಿಜ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಸಮೀಕ್ಷಾ ಕಾರ್ಯದ ನೋಡಲ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *