ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್-ಎಡಿಸಿ

ತುಮಕೂರು : ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಶಬ್ಬೀರ್ ಅಹಮದ್ ಅವರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮೊದಲಿಗೆ ಕಳೆದ ಸಭೆಯ ಅನುಪಾಲನಾ ವರದಿಯನ್ನು ಪರಿಶೀಲಿಸಿದರು.

ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಲೀಡ್ ಬ್ಯಾಂಕ್, ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಫಲಾನುಭವಿಗಳಿಗೆ ನೀಡಿರುವ ಸೌಲಭ್ಯಗಳ ವಿವರವನ್ನು ಪಡೆದರು. 

ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲಿಸಿದ ಅವರು, ಜಿಲ್ಲೆಯಲ್ಲಿರುವ ಉರ್ದು ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯಾ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವುದರೊಂದಿಗೆ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಿಯಾ ಯೋಜನೆ ತಯಾರಿಸಬೇಕೆಂದು ನಿರ್ದೇಶನ ನೀಡಿದರು. 

ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ಅನುದಾನಿತ-ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ, ವಿದ್ಯಾರ್ಥಿವೇತನಕ್ಕಾಗಿ ನವೀಕರಣ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಮಾಹಿತಿ ಪಡೆದರು.

ವಿವಿಧ ಇಲಾಖಾವಾರು ಭೌತಿಕ ಮತ್ತು ಆರ್ಥಿಕ ಪ್ರಗತಿ ಪರಿಶೀಲಿಸಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುಷ್ಠಾನ ಮಾಡುವ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಮಾಹಿತಿ ಪಡೆದರಲ್ಲದೆ,  ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿರುವ ಅಂಗನವಾಡಿಗಳ ಸಂಖ್ಯೆ ದಾಖಲಾದ ಮಕ್ಕಳ ಸಂಖ್ಯೆ ಮತ್ತು ಅಂಗನವಾಡಿ ಕಟ್ಟಡಗಳ ಮೂಲಸೌಕರ್ಯದ ಕುರಿತು ಮಾಹಿತಿಯನ್ನು ಸಲ್ಲಿಸಬೇಕೆಂದು ಸೂಚಿಸಿದರು. 

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಶಬ್ಬೀರ್ ಅಹಮದ್ ಸಭೆಗೆ ಪ್ರಗತಿ ವಿವರದ ಮಾಹಿತಿ ನೀಡುತ್ತಾ, ಜೈನ್ ಸಮುದಾಯದ ವಸತಿ ಶಾಲೆಗೆ ಭೋಜನಾವೆಚ್ಚ ನೀಡಲು ಬೇಡಿಕೆ ಬಂದಿದೆ. ಕ್ರೈಸ್ತ ಸಮುದಾಯಕ್ಕೆ ಮೀಸಲಿಟ್ಟಿರುವ ಸ್ಮಶಾನ ಭೂಮಿಯ ಆವರಣ ಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವುದರಿಂದ ಆವರಣ ಗೋಡೆ ನಿರ್ಮಾಣಕ್ಕೆ ವಿಳಂಬವಾಗಿದೆ. ಪ್ರಕರಣ ಇತ್ಯರ್ಥವಾದ ಕೂಡಲೇ ಆವರಣ ಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯ ಗಮನಕ್ಕೆ ತಂದರು. 

 ಜಿಲ್ಲೆಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ 4257 ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹೊಸದಾಗಿ ಹಾಗೂ  21,910 ವಿದ್ಯಾರ್ಥಿಗಳು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ವಿವರಣೆ ನೀಡಿದರು.   

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರಿವು ಸಾಲ ಯೋಜನೆಯಡಿ 34, ಶ್ರಮಶಕ್ತಿ ಯೋಜನೆಯಡಿ 11, ವಿದೇಶಿ ವ್ಯಾಸಂಗಕ್ಕಾಗಿ 1, ವೃತ್ತಿ ಪ್ರೋತ್ಸಾಹ ಯೋಜನೆಯಡಿ 11, ಟ್ಯಾಕ್ಸಿ ಸೌಲಭ್ಯಕ್ಕಾಗಿ 4 ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಲಾಗಿದೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ಇಲಾಖೆಯಡಿ ಬಡತನ ರೇಖೆಗಿಂತ ಕೆಳಗಿರುವ 198 ಅಲ್ಪಸಂಖ್ಯಾತರ ಕುಟುಂಬಗಳಿಗೆ ಮನೆಗಳನ್ನು ನೀಡಲಾಗಿದ್ದು, ಹಕ್ಕು ಪತ್ರಗಳನ್ನು ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುವುದು.

ಸಭೆಯಲ್ಲಿ ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ನಾಮ ನಿರ್ದೇಶಿತ ಸದಸ್ಯರಾದ ಮಹಮದ್ ಕಲಿಮ್ ಉಲ್ಲಾ, ಜೆಪಿನ್ ಜಾಯ್, ಜೆ.ಪಿ. ಉಮೇಶ್ ಕುಮಾರ್, ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *