
ಮಕೂರು- ಇದೇ ತಿಂಗಳ 15 ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು.
ಅವರಿಂದು ನಗರದ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಶ್ರೀಮಠದ ಧ್ಯಾನ ಮಂದಿರದಲ್ಲಿ ಕೆಲಹೊತ್ತು ಧ್ಯಾನ ಮಾಡಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜು ಬೊಮ್ಮಾಯಿ, ಸದಾನಂದಗೌಡರು, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಅಶೋಕ್, ಬಸವನಗೌಡ ಪಾಟೀಲ್ ಯತ್ನಾಳ್, ವಿ. ಸೋಮಣ್ಣ ಸೇರಿದಂತೆ ಎಲ್ಲಾ ಹಿರಿಯರ ಸಮುಖದಲ್ಲಿ ಜವಾಬ್ದಾರಿ ಸ್ವೀಕಾರ ಮಾಡುವುದಾಗಿ ಅವರು ತಿಳಿಸಿದರು.
ರಾಷ್ಟ್ರೀಯ ನಾಯಕರಿಗೆ ಚುನಾವಣೆ ಇರುವುದರಿಂದ ಅವರು ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಕೇಂದ್ರದ ವೀಕ್ಷಕರು ಬರಲಿದ್ದಾರೆ ಎಂದು ಅವರು ಹೇಳಿದರು.
ರಾಜ್ಯಾಧ್ಯಕ್ಷರಾಗಿದ್ದ ನಳೀನ್‍ಕುಮಾರ್ ಕಟೀಲ್ ಅವರು ಯಶಸ್ವಿಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಕಟ್ಟಿದ್ದಾರೆ. ನಳೀನ್‍ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಎಲ್ಲ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಅವರ ಸಲಹೆ, ಸೂಚನೆಗಳೊಂದಿಗೆ ಪಕ್ಷವನ್ನು ರಾಜ್ಯದಲ್ಲಿ ಸಂಘಟಿಸುವ ಕೆಲಸ ಮಾಡುತ್ತೇನೆ ಎಂದರು.
ನ. 16 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಮುಂದೂಡಲಾಗಿದೆ.. ಹಾಗೆಯೇ ಶುಕ್ರವಾರದೊಳಗೆ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯನ್ನು ಸಹ ಕರೆಯಲಿದ್ದೇವೆ ಎಂದರು.
ರಾಜ್ಯದ ರೈತರನ್ನು ಕಾಡುತ್ತಿರುವ ಬರಕ್ಕೆ ಯಾವ ರೀತಿ ಪರಿಹಾರ ಮಾಡಬೇಕು ಎಂಬುದರ ಬಗ್ಗೆ ಪಕ್ಷದ ಮುಖಂಡರೊಂದಿಗೆ ಕುಳಿತು ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಮಾಜಿ ಸಚಿವ ಮಾಧುಸ್ವಾಮಿ ಅವರ ಕಾಲಿಗೆ ಸಮಸ್ಯೆಯಾಗಿದೆ. ಹಾಗಾಗಿ ಅವರು ಬಂದಿಲ್ಲ. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುತ್ತೇನೆ ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರು ನಮ್ಮ ಮೇಲಿನ ಪ್ರೀತಿಯಿಂದ ಸಲಹೆ ನೀಡುತ್ತಾರೆ. ಹಿರಿಯ ಮುಖಂಡರು ನೀಡುವ ಒಳ್ಳೆಯ ಸಲಹೆಯನ್ನು ಕೇಳುವುದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದರು.