ತುಮಕೂರು : ಜಿಲ್ಲೆಯಲ್ಲಿ ಅಕ್ಟೋಬರ್ 27, 28 ಮತ್ತು 29 ರಂದು ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆ ನಡೆಯಲಿದ್ದು, ಅಕ್ಟೋಬರ್ 27ರ ಸಂಜೆ 4.30 ಗಂಟೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಅವರಿಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದ ಆವರಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡುತ್ತಾ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ-2023ಯನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸುವರು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವರು, ಭಾರತ ಸರ್ಕಾರ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಎ. ನಾರಾಯಣಸ್ವಾಮಿರವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಕ್ರೀಡಾಜ್ಯೋತಿ ಸ್ವೀಕರಿಸುವರು. ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸುವರು. ತುಮಕೂರು ನಗರ ವಿಧಾನಸಭಾ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕರಾದ ಟಿ.ಬಿ.ಜಯಚಂದ್ರ ಸೇರಿದಂತೆ ಕಾರ್ಯಕ್ರಮದಲ್ಲಿ ವಿವಿಧ ಸಚಿವರು, ಸಂಸದರು, ಶಾಸಕರು, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ವಿವಿಧ ಜಿಲ್ಲೆಗಳಿಂದ ಆಗಮಿಸುವ ನೌಕರರ ನೋಂದಣಿಯನ್ನು ಅಕ್ಟೋಬರ್ 27ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಮಾಡಿಕೊಳ್ಳಲಾಗುವುದು, ಅಂದು ಸಂಜೆ 4.30 ಗಂಟೆಗೆ ಧ್ವಜಾರೋಹಣ, ಜಿಲ್ಲಾವಾರು ಪಥಸಂಚಲನ, ಮುಖ್ಯಮಂತ್ರಿಗಳಿಂದ ಗೌರವ ವಂದನೆ ಸ್ವೀಕಾರ ಮತ್ತು ಬಲೂನ್ ಹಾರಿಸುವ ಮೂಲಕ ಕ್ರೀಡಾಕೂಟ ಉದ್ಘಾಟನೆ, ಕ್ರೀಡಾ ಜ್ಯೋತಿ ಸ್ವೀಕಾರ, ನಂತರ ಮುಖ್ಯಮಂತ್ರಿಗಳಿಂದ ಹಾಗೂ ಗಣ್ಯರಿಂದ ಭಾಷಣ, ಈಗಾಗಲೇ ಆಯಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ 3500 ಮಹಿಳಾ ನೌಕರರು ಮತ್ತು 6500 ಪುರುಷ ನೌಕರರು ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಔಟಿಟiಟಿe ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲಾ ಕ್ರೀಡಾಪಟುಗಳಿಗೆÀ ಟ್ರಾಕ್‍ಪ್ಯಾಂಟ್, ಟೀ-ಷರ್ಟ್ ಮತ್ತು ಕ್ಯಾಪ್ ವಿತರಿಸಲಾಗುವುದು. ರಾಜ್ಯ ಮಟ್ಟದ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾಗುವ ಪ್ರಥಮ/ದ್ವಿತೀಯ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಭಾಗವಹಿಸಿದ ಎಲ್ಲಾ ನೌಕರರಿಗೂ ಮೂರು ದಿನಗಳ ಕಾಲ ರುಚಿ-ಶುಚಿಯಾದ ಊಟೋಪಹಾರದ ವ್ಯವಸ್ಥೆ ಮಾಡಲಾಗಿದೆ. ಭಾಗವಹಿಸುವ ಪುರುಷ ಮತ್ತು ಮಹಿಳಾ ನೌಕರರಿಗೆ ಪ್ರತ್ಯೇಕವಾಗಿ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ತುಮಕೂರು ನಗರದಲ್ಲಿರುವ ಆಯ್ದ ಕ್ರೀಡಾಂಗಣಗಳಲ್ಲಿ ವಿವಿಧ ಕ್ರೀಡೆಗಳನ್ನು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ವಸತಿ ಹಾಗೂ ಕ್ರೀಡೆಗಳು ನಡೆಯುವ ಸ್ಥಳಗಳಿಗೆ ಮಹಾತ್ಮಾ ಗಾಂಧಿ ಕ್ರೀಡಾಂಗಣದಿಂದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಅಕ್ಟೋಬರ್ 27ರ ಸಂಜೆ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ಮುಗಿದ ನಂತರ ಸಂಜೆ 7 ಗಂಟೆಗೆ ಕನ್ನಡದ ಖ್ಯಾತ ಗಾಯಕರಾದ ಶ್ರೀ ಹೇಮಂತ್, ಶ್ರೀಮತಿ ಇಂದು ನಾಗರಾಜ್, ಶ್ರೀ ಕಂಬದ ರಂಗಯ್ಯ ಸರಿಗಮಪ ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ವಿರುತ್ತದೆ. ಅಕ್ಟೋಬರ್ 28ರ ಸಂಜೆ 7 ಗಂಟೆಗೆ ಕನ್ನಡದ ಖ್ಯಾತ ಜಾನಪದ ಗಾಯಕರಾದ ಶ್ರೀಮತಿ ಸವಿತಕ್ಕ ಬ್ಯಾಂಡ್, ಶ್ರೀ ಕಡಬಗೆರೆ ಮುನಿರಾಜು ಮತ್ತು ತಂಡದವರಿಂದ ಜಾನಪದೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಈ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳು, ಅಥ್ಲೆಟ್ಲಿಕ್ಸ್ ಸೇರಿದಂತೆ ಗುಂಪು ಸ್ಪರ್ಧೆಗಳು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳೂ ಸಹ ನಡೆಯಲಿವೆ.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಅಕ್ಟೋಬರ್ 27 ರಿಂದ 29ರವರೆಗೆ ಸರ್ಕಾರ ವಿಶೇಷ ಸಾಂದರ್ಭಿಕ ರಜೆ ನೀಡಿದೆ.
ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕೇಂದ್ರ ಸಂಘದ ಔಟಿಟiಟಿe ನೋಂದಣಿ ಮಾಡಿಕೊಂಡಿರುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷ ಎನ್.ನರಸಿಂಹರಾಜು, ರಾಜ್ಯ ಕಾರ್ಯದರ್ಶಿಗಳಾದ ನೆಲ್ಕುದ್ರಿ ಸದಾನಂದಪ್ಪ, ರಾಮನಗರ ಜಿಲ್ಲಾಧ್ಯಕ್ಷರಾದ ಕೆ.ಸತೀಶ್, ಶ್ರೀನಿವಾಸ್, ಹಿರಿಯ ಉಪಾಧ್ಯಕ್ಷರಾದ ಎಸ್.ಬಸವರಾಜು, ಎಂ.ವಿ.ರುದ್ರಪ್ಪ, ಮಾಲತೇಶ್ ಎನ್., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ರೋಹಿತ್ ಗಂಗಾಧರ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮೋಹನ್ ಕುಮಾರ್ ಸೇರಿದಂತೆ ಸಂಘದ ಪದಾಧಿಕಾರಿಗಳು, ರಾಜ್ಯ ಪರಿಷತ್ ಸದಸ್ಯರು, ಶಾಖೆಗಳ ಅಧ್ಯಕ್ಷರು, ಮತ್ತಿತರರು ಉಪಸ್ಥಿತರಿದ್ದರು.