ತುಮಕೂರು : ರೈತರ ಅನುಕೂಲಕ್ಕಾಗಿ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು, ತಿಪಟೂರು, ತುರುವೇಕೆರೆ ತಾಲ್ಲೂಕು ಸೇರಿ 3 ಹೆಸರುಕಾಳು ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ಸಂಜೆ ಹೆಸರುಕಾಳು ಖರೀದಿ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹೆಸರುಕಾಳು ಉತ್ಪಾದನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದ್ದು, ಖರೀದಿ ಕೇಂದ್ರಗಳು ಆಗಸ್ಟ್ 29ರಿಂದ ಕಾರ್ಯಾರಂಭಗೊಳ್ಳಲಿವೆ ಎಂದು ತಿಳಿಸಿದರು.
ಖರೀದಿ ಕೇಂದ್ರದಲ್ಲಿ ಪ್ರತಿ ಕ್ವಿಂಟಾಲ್ ಹೆಸರು ಕಾಳಿಗೆ 8682 ರೂ. ಬೆಂಬಲ ಬೆಲೆ ನಿಗಧಿಪಡಿಸಲಾಗಿದ್ದು, ರೈತರು ಖರೀದಿ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಾಲ್ ಮತ್ತು ಪ್ರತಿ ಎಕರೆಗೆ 2 ಕ್ವಿಂಟಾಲ್‍ನಂತೆ ಹೆಸರುಕಾಳು ಖರೀದಿ ಮಾಡಲು ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು.
ಖರೀದಿ ಕೇಂದ್ರಗಳಲ್ಲಿ 90 ದಿನಗಳ ಕಾಲ ಹೆಸರುಕಾಳು ಖರೀದಿ ಮಾಡಲಾಗುವುದು. ಜಿಲ್ಲೆಯ ರೈತರು ಎನ್.ಐ.ಸಿ ಸಂಸ್ಥೆ ಅಭಿವೃದ್ಧಿಪಡಿಸಿರುವ ಬೆಂಬಲ ಬೆಲೆ ಯೋಜನೆ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ರೈತರಿಂದ ಮಾತ್ರ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಸಬೇಕು. ಯಾವುದೇ ಕಾರಣಕ್ಕೂ ವರ್ತಕರಿಂದ ಖರೀದಿಸದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು ಖರೀದಿ ಪ್ರಮಾಣದ ಮೌಲ್ಯಕ್ಕೆ ತಕ್ಕ ಹಾಗೆ ರೈತರಿಗೆ ಡಿಬಿಟಿ ಮೂಲಕ ನಿಗಧಿತ ಅವಧಿಯೊಳಗೆ ನೇರವಾಗಿ ಹಣ ವರ್ಗಾವಣೆ ಮಾಡಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಮತ್ತು ಕೃಷಿ ಮಾರಾಟ ಇಲಾಖೆ ಉಪ ನಿರ್ದೇಶಕ ಬಿ.ರಾಜಣ್ಣ ಉಪಸ್ಥಿತರಿದ್ದರು.