ಹೊರ ರಾಜ್ಯಗಳಿಗೆ ಮೇವು ಸರಬರಾಜಾಗುವುದನ್ನು ನಿರ್ಬಂಧಿಸಿ ಆದೇಶ

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ನಿರ್ವಹಿಸಲು ಹಾಗೂ ಮೇವಿನ ಲಭ್ಯತೆಯನ್ನು ಸಮರ್ಪಕವಾಗಿ ಬಳಸಲು ಹೊರ ರಾಜ್ಯಗಳಿಗೆ ಮೇವು ಸರಬರಾಜಾಗುವುದನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿಸಿದ್ದಾರೆ.

 2023-24ನೇ ಮುಂಗಾರು ಹಂಗಾಮಿಗೆ ತುಮಕೂರು ಜಿಲ್ಲೆಯ ಎಲ್ಲಾ 10 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರ ಘೋಷಿಸಿದ್ದು, ಜಿಲ್ಲೆಯ ಬರ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ತುಮಕೂರು ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಮೇವು ಸರಬರಾಜು ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಮೇವಿನ ಲಭ್ಯತೆ ಕಡಿಮೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಸರಬರಾಜಾಗುವ ಮೇವನ್ನು ನಿರ್ಬಂಧ ಮಾಡಲು ತೀರ್ಮಾನಿಸಲಾಗಿದೆ.

 ಈ ಆದೇಶವನ್ನು ಉಲ್ಲಂಘಿಸಿ ಅಕ್ರಮವಾಗಿ ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಮೇವು ಸರಬರಾಜು ಮಾಡುತ್ತಿರುವುದು ಕಂಡು ಬಂದಲ್ಲಿ ತಕ್ಷಣ ಅಂತಹ ಮೇವನ್ನು ವಶಪಡಿಸಿಕೊಂಡು ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮವಹಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಹಾಗೂ ಪೊಲಿಸ್ ಇಲಾಖೆಗೆ ಸೂಚಿಸಲಾಗಿದೆ. 

Leave a Reply

Your email address will not be published. Required fields are marked *