ಕೆಪಿಸಿಸಿ ಸದಸ್ಯ ರವಿಕುಮಾರ್ ರಾಯಸಂದ್ರ ಅವರನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆ ಪಡೆದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಮುಂಬರುವ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ರವಿಕುಮಾರ್ ರಾಯಸಂದ್ರ ಅವರನ್ನು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿರುವುದು ಮಹತ್ವ ಪಡೆದಿದೆ.
ತಮ್ಮ ನೇಮಕಕ್ಕೆ ಕಾರಣರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ , ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಮತ್ತು ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರಿಗೆ ರವಿಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
ಪರಿಚಯ: ತುರುವೇಕೆರೆ ತಾಲೂಕು ದಂಡಿನಶಿವರ ಹೋಬಳಿ ರಾಯಸಂದ್ರ ಗ್ರಾಮದ ರೈತಾಪಿ ಕುಟುಂಬದಲ್ಲಿ 1983ಮೇ 15ರಂದು ಜನಿಸಿದ ರವಿಕುಮಾರ್ ತುಮಕೂರು ನಗರದಲ್ಲಿ ಕಾಲೇಜು ವ್ಯಾಸಂಗ ಮುಗಿಸಿ ವಿದ್ಯಾರ್ಥಿ ಸಂಘಟನೆಯಲ್ಲಿ ಜನಪರ ಹೋರಾಟದಲ್ಲಿ ತೊಡಗಿಸಿಕೊಂಡರು. 2010ರಲ್ಲಿ ತುರುವೇಕೆರೆ ತಾಲೂಕಿನ ಮಾಯಸಂದ್ರ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಹಾಗೂ 2016ರಲ್ಲಿ ಅದೇ ತಾಲೂಕಿನ ದಂಡಿನಶಿವರ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 2018ರ ವಿಧಾನ ಸಭಾ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಪ್ರಸ್ತುತ ಕೆಪಿಸಿಸಿ ಸದಸ್ಯರಾಗಿರುವ ರವಿಕುಮಾರ್ ರಾಯಸಂದ್ರ ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.