ನ.22ರಂದು ಸಾಹೇ ವಿಶ್ವವಿದ್ಯಾಲಯದ 14 ನೇ ಘಟಿಕೋತ್ಸವ : 1086 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ತುಮಕೂರು: ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ನವೆಂಬರ್ 22ನೇ ಶನಿವಾರ ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 14 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, 14ನೇ ಸಾಹೇ ಘಟಿಕೋತ್ಸವದಲ್ಲಿ ಪಾವಗಡದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಸ್ಥಾಪಕರಾದ ಶ್ರೀ ಸ್ವಾಮಿ ಜಪಾನಂದಜಿ ಮಹಾರಾಜ್ ಹಾಗೂ ವಿಜ್ಞಾನಿ-ಭಾರತೀಯ ವಿಜ್ಞಾನ ಸಂಸ್ಥೆಯ ಏರೋಸ್ಪೇಸ್ ಇಂಜಿನಿಯರಿಂಗ್‍ನ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಕೆ.ಪಿ.ಜೆ.ರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ಮಾಜಿ ಕೇಂದ್ರ ಸಚಿವರು ಹಾಗೂ ಸಂಸದರಾದ ಜಯರಾಮ್ ರಮೇಶ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಬೋಧಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಹಾಗೂ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಟ್ರಸ್ಟಿಗಳಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ಮತ್ತು ಡಾ.ಜಿ.ಎಸ್.ಆನಂದ್ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವರಾದ ಡಾ. ಅಶೋಕ್ ಮೆಹತಾ, ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕರಾದ ಡಾ.ಗುರುಶಂಕರ್ ಸಿ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಸಾಣಿಕೊಪ್ಪ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್, ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್, ಟಿ.ಬೇಗೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರಾದ ಡಾ ದಿವಾಕರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ ಸೇರಿದಂತೆ ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಲಿದ್ದಾರೆ.

ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದ ಹೊರಾಂಗಣದಲ್ಲಿ ನಡೆಯಲಿರುವ 14ನೇ ಘಟಿಕೋತ್ಸವಕ್ಕೆ ಸಿದ್ಧವಾಗಿರುವ ಬೃಹತ್ ವೇದಿಕೆಯಲ್ಲಿ 5 ಸಾವಿರಕ್ಕೂ ಹೆಚ್ಚು ಆಸನ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆಸ್ಪತ್ರೆಯಲ್ಲಿ ದಾಖಲಾದ ಬಡ ರೋಗಿಗಳಿಗೆ ಎಲ್ಲಾ ರೀತಿಯ ಉಚಿತ ಪರೀಕ್ಷೆಗಳು, ಸ್ಕ್ಯಾನಿಂಗ್‍ಗಳು ಹಾಗೂ ಉಚಿತ ಜನರಲ್ ಬೆಡ್‍ಗಳು ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್ ತಿಳಿಸಿದರು.

ಸಾಹೇ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಅಶೋಕ್ ಮೆಹತಾ, ಪರೀಕ್ಷಾಂಗ ವಿಭಾಗದ ನಿಯಂತ್ರಕರಾದ ಡಾ.ಗುರುಶಂಕರ್, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್, ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್ ಮತ್ತು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *