ತುಮಕೂರು:ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರು ಗುರುವಾರ ಬರಪೀಡಿತ, ಗಣಿಬಾಧಿತ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿ ಪ್ರವಾಸ ಮಾಡಿ ಮತಯಾಚನೆ ಮಾಡಿದರು. ಸ್ಥಳೀಯ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ ಜನರ ಬೇಡಿಕೆ, ಅಹವಾಲುಗಳನ್ನು ಆಲಿಸಿದರು.
ಪ್ರಮುಖವಾಗಿ ಕೊಬ್ಬರಿಗೆ ವೈಜ್ಞಾನಿಕ ಬೆಂಬಲ ಬೆಲೆ ದೊರಕಿಸಿಕೊಡಬೇಕು ಎಂಬುದು ಇಲ್ಲಿನತೆಂಗು ಬೆಳೆಗಾರರ ಪ್ರಮುಖ ಬೇಡಿಕೆಯಾಗಿತ್ತು. ಕೊಬ್ಬರಿ ಖರೀದಿ ಬೆಲೆಗಿಂಥಾ ಉತ್ಪಾದನಾ ವೆಚ್ಚವೇ ಹೆಚ್ಚಾಗಿ ಬೆಳೆಗಾರರು ಪ್ರತಿ ಬಾರಿ ನಷ್ಟ ಅನುಭವಿಸುವಂತಾಗಿದೆ. ಪದೇಪದೇ ಕೊಬ್ಬರಿ ಬೆಲೆ ಕುಸಿಯುವುದು, ಬೆಂಬಲ ಬೆಲೆ ಪಡೆಯಲು ಬೆಳೆಗಾರರು ಹೋರಾಟ ಮಾಡಬೇಕಾದ ಪರಿಸ್ಥಿತಿ ನಿಲ್ಲಬೇಕು. ತಾವು ಸಂಸದರಾಗಿ ಆಯ್ಕೆಯಾದ ನಂತರ ಕೇಂದ್ ಸರ್ಕಾರದ ಜೊತೆ ಚರ್ಚೆ ಮಾಡಿ, ಕೊಬ್ಬರಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗಧಿ ಮಾಡಿ, ಈ ಸಮಸ್ಯೆಗೊಂದುಶಾಶ್ವತ ಪರಿಹಾರ ಹುಡುಕುವ ಪ್ರಯತ್ನ ಮಾಡುವುದಾಗಿ ವಿ.ಸೋಮಣ್ಣ ಭರವಸೆ ನೀಡಿದರು.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತೊಂದು ಪ್ರಮುಖ ಸಮಸ್ಯೆ ಎಂದರೆ ಕುಡಿಯುವ ನೀರಿನ ಸಮಸ್ಯೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮನೆಮನೆಗೂ ಕುಡಿಯುವ ನೀರು ಸರಬರಾಜು ಮಾಡುವ ಜಲಜೀವನ್ ಯೋಜನೆ ಅನುಷ್ಟಾನಗೊಳಿಸಿದೆ. ಇದಕ್ಕಾಗಿ ಶಾಶ್ವತ ಕುಡಿಯುವ ನೀರಿನ ಯೋಜನೆಗಳ ಅಗತ್ಯವಿದೆ.ವಿವಿಧ ನೀರಾವರಿಯೋಜನೆಗಳಡಿ ಕೆರೆಗಳಿಗೆ ನೀರು ತುಂಬಿಸಿ ಕೃಷಿಗೆ ನೆರವಾಗುವಂತಹ ಕಾರ್ಯಕ್ರಮ ರೂಪಿಸಬೇಕಾಗಿದೆ. ಎತ್ತಿನಹೊಳೆ, ಭದ್ರ ಮೇಲ್ದಂಡೆ ಯೋಜನೆಗಳ ಕಾಮಗಾರಿಯನ್ನು ವೇಗಗೊಳಿಸಿ ಪೂರ್ಣಗೊಳಿಸಲು ಆದ್ಯತೆ ನೀಡುವುದಾಗಿ ಹೇಳಿದರು.
ಈ ಭಾಗದಲ್ಲಿ ಗಾರ್ಮೆಂಟ್ಸ್, ಮತ್ತಿತರ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಪ್ರಾಮಾಣಿಕಪ್ರಯತ್ನ ಮಾಡುತ್ತೇನೆ, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ದೊರೆತು ಅವರು ಬದುಕು ರೂಪಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ಹೇಳಿದ ಅವರು, ಈಗ ನಡೆಯುತ್ತಿರುವ ಚುನಾವಣೆ ಹಲವು ಕಾರಣಗಳಿಂದ ಮಹತ್ವವಾಗಿದೆ. ಈ ದೇಶದ ರಕ್ಷಣೆ, ಅಭಿವೃದ್ಧಿ, ಭವಿಷ್ಯದ ದೃಷ್ಟಿಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಭೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಹಲವು ನಾಯಕರು ತೀರ್ಮಾನ ಮಾಡಿದ್ದಾರೆ. ಇದೇ ಕಾರಣಕ್ಕೆ ರಾಜ್ಯದಲ್ಲಿ ಈ ಚುನಾವಣೆಗೆ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ. ಭಾರತದ ಭವಿಷ್ಯದ ದೃಷ್ಟಿಯಿಂದ ಮೋದಿಯವರಿಗೆ ಶಕ್ತಿ ತುಂಬಲು ಎನ್.ಎಡಿ.ಎ ಅಭ್ಯರ್ಥಿಯಾದ ತಮಗೆ ಮತ ನೀಡಿ ಆಯ್ಕೆ ಮಾಡಬೇಕು ಎಂದು ವಿ.ಸೋಮಣ್ಣ ಮನವಿ ಮಾಡಿದರು.
ಬುಕ್ಕಾಪಟ್ಟಣ ಹೋಬಳಿ ಮರಡಿ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಬೆಳಿಗ್ಗೆ ಪೂಜೆ ಸಲ್ಲಿಸಿದ ನಂತರ ವಿ.ಸೋಮಣ್ಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದರು. ಮರಡಿ ರಂಗನಾಥಸ್ವಾಮಿ ಕ್ಷೇತ್ರದ ಪ್ರಕೃತಿ ಸೌಂದರ್ಯಕ್ಕೆ ಮನಸೋತ ವಿ.ಸೋಮಣ್ಣ, ಈ ಕ್ಷೇತ್ರವನ್ನು ಪ್ರವಾಸಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಬೇಕು ಎಂಬ ಇಂಗಿತ ವ್ಯಕ್ತಪಡಿಸಿದರು.
ತಾಲ್ಲೂಕಿನ 19 ಗ್ರಾಮ ಪಂಚಾಯಿತಿ ವ್ಯಾಪ್ತತಿಯ ಗ್ರಾಮಗಳಲ್ಲಿ ಪ್ರವಾಸ ಮಾಡಿ ಮತಯಾಚಿಸಿದರು. ಎಲ್ಲಡೆ ಬಿಜೆಪಿ ಹಗೂ ಜೆಡಿಎಸ್ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು, ತಮ್ಮ ಗ್ರಾಮದ ಸಮಸ್ಯೆಗಳ ಬಗ್ಗೆ ಸೋಮಣ್ಣರ ಗಮನಕ್ಕೆ ತಂದರು. ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಎಸ್.ಡಿ.ಎ ಅಭ್ಯರ್ಥಿ ಸೋಮಣ್ಣರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.
ತುಮಕೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ, ಮಾಜಿ ಸಚಿವರಾದ ಗೋಪಾಲಯ್ಯ, ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್‍ಬಾಬು, ಬಿಜೆಪಿ ಮುಖಂಡರಾದ ಎಸ್.ಶಿವಪ್ರಸಾದ್,ಬಿ.ಕೆ.ಮಂಜುನಾಥ್, ಎಸ್.ಆರ್.ಗೌಡರು ಸೇರಿದಂತೆ ಸ್ಥಳೀಯ ಮುಖಂಡರು ಸೋಮಣ್ಣನವರು ಪ್ರವಾಸದಲ್ಲಿ ಭಾಗವಹಿಸಿದ್ದರು.