ನೀರು,ಮೇವಿನ ಸಮಸ್ಯೆಗಳ ಬಗ್ಗೆ ದೂರು ನೀಡಲು ಸಹಾಯವಾಣಿ ಕೇಂದ್ರ ಸ್ಥಾಪಿಸಿ – ಜಿಲ್ಲಾಧಿಕಾರಿ ಸೂಚನೆ

ತುಮಕೂರು ಃ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸಮಸ್ಯೆಗಳಿಗೆ ಸಂಬಂಧಿಸಿದ ಸಾರ್ವಜನಿಕ ದೂರುಗಳನ್ನು ಸಲ್ಲಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ಸಂಜೆ ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಸಹಾಯವಾಣಿ ಕೇಂದ್ರವು ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಯನ್ನು ತ್ವರಿತವಾಗಿ ವಿಶ್ಲೇಷಿಸಿ, ಅಗತ್ಯವಿದ್ದಾಗ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು. ಸಹಾಯವಾಣಿ ಕೇಂದ್ರದಲ್ಲಿ ದಾಖಲಾಗುವ ಸಾರ್ವಜನಿಕರ ಸಮಸ್ಯೆ ಹಾಗೂ ಪರಿಹಾರ ಕ್ರಮದ ವರದಿಯನ್ನು ಪ್ರತಿದಿನ ತಮಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ತಲೆದೋರಿದಾಗ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಜನ-ಜಾನುವಾರುಗಳಿಗೆ ನೀರಿನ ಪೂರೈಕೆ, ಶುದ್ಧೀಕರಣ ಮತ್ತು ಲಭ್ಯತೆ ಬಗ್ಗೆ ಮುಂದಿನ ಸಭೆಯಲ್ಲಿ ಮಾಹಿತಿ ನೀಡಬೇಕು ಸೂಚನೆ ನೀಡಿದರು.

ಕೊಳವೆ ಬಾವಿ ಕೊರೆದು 3-4 ತಿಂಗಳಾದರೂ ವಿದ್ಯುತ್ ಸರಬರಾಜು ಸಂಪರ್ಕವಿಲ್ಲದೆ ಹಲವಾರು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇಂತಹ ಪ್ರಕರಣಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿಯಮಿತವಾಗಿ ಪರೀಕ್ಷಿಸಬೇಕು. ದುರಸ್ತಿಯಲ್ಲಿರುವ ನೀರಿನ ಘಟಕಗಳನ್ನು ತ್ವರಿತವಾಗಿ ಸರಿಪಡಿಸಬೇಕು ಎಂದು ನಿರ್ದೇಶಿಸಿದರು.

ನಂತರ ಮಾತನಾಡಿದ ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ನಗರ ವ್ಯಾಪ್ತಿಯಲ್ಲಿ ಪ್ರಸ್ತುತ ಯಾವುದೇ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಸಹಾಯವಾಣಿ ಕೇಂದ್ರದಲ್ಲಿ ಈವರೆಗೂ 88 ದೂರುಗಳು ದಾಖಲಾಗಿದ್ದು, ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ|| ಗಿರೀಶ್‍ಬಾಬು ರೆಡ್ಡಿ ಸಭೆಗೆ ಮಾಹಿತಿ ನೀಡುತ್ತಾ ಜಾನುವಾರುಗಳಿಗೆ ಸದ್ಯಕ್ಕೆ ಮೇವಿನ ಕೊರತೆ ಇರುವುದಿಲ್ಲ. ಮೇವು ಉತ್ಪಾದಿಸಲು ನೀರಾವರಿ ಸೌಲಭ್ಯ ಹೊಂದಿರುವ ರೈತರಿಗೆ ಮೇವಿನ ಬೀಜದ ಮಿನಿ ಕಿಟ್‍ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು ಡಾ: ಎನ್ ತಿಪ್ಪೇಸ್ವಾಮಿ, ಉಪವಿಭಾಗಾಧಿಕರಿಗಳು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ಬೆಸ್ಕಾಂ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ತಹಶೀಲ್ದಾರರು ಹಾಗೂ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *