ತುಮಕೂರು : ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿ ಸಮ್ಮುಖದಲ್ಲಿ ನಡೆದ ಶ್ರೀ ವಾಗ್ದೇವಿ ಹೋಮದಲ್ಲಿ ಇಂದು ಬೆಳಿಗ್ಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ್ ಭಾಗಿಯಾಗಿ ಪೂಜೆ ಸಲ್ಲಿಸಿದರು.
ಮಾತೆ ದುರ್ಗೆಯ ಎರಡನೇ ಸ್ವರೂಪವಾದ ಬ್ರಹ್ಮಚಾರಿಣಿ ಅಲಂಕಾರದಲ್ಲಿದ್ದ ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಸಚಿವರು ಪಡೆದು ಲಘು ಪೂರ್ಣಾಹುತಿ, ಅಷ್ಟವದಾನ ಸೇವೆ, ವಿಶೇಷ ಪೂಜೆ ನೆರವೇರಿಸಿದರು.
ನವರಾತ್ರಿಯ ಎರಡನೇ ದಿನ ದೇವಿ ದುರ್ಗೆಯನ್ನು ಬ್ರಹ್ಮಚಾರಿಣಿ ರೂಪದಲ್ಲಿ ಪೂಜಿಸಲಾಗುತ್ತದೆ. ಬಹಳ ಕಠಿಣವಾದ ತಪಸ್ಸು ಮಾಡಿದ ಕಾರಣದಿಂದಾಗಿ ದೇವಿಗೆ ತಪಶ್ಚರಿಣೀ ಅರ್ಥಾತ್ ಬ್ರಹ್ಮಚಾರಿಣೀ ಎನ್ನುವ ಹೆಸರು ಬಂದಿದೆ. ಕೈಯಲ್ಲಿ ಗುಲಾಬಿ ಧರಿಸಿರುವ ದೇವಿಯು ಒಂದು ಕೈಯಲ್ಲಿ ಜಪಮಾಲೆ ಹಾಗೂ ಇನ್ನೊಂದು ಕೈಯಲ್ಲಿ ಕಮಂಡಲವನ್ನು ಹಿಡಿದುಕೊಂಡಿರುತ್ತಾಳೆ. ಇಂದು ಪ್ರಗತಿಯ ಸಂಕೇತವಾಗಿರುವ ಹಸಿರು ವಸ್ತ್ರವನ್ನು ಧರಿಸಿ ದೇವಿಯನ್ನು ಪೂಜಿಸಿದಲ್ಲಿ ಸುಖ, ಶಾಂತಿ, ಸಮೃದ್ಧಿ ದೊರೆಯುತ್ತದೆ ಎಂಬ ನಂಬಿಕೆ ಇದೆ.
ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗುವ ಅಮರ ಶಿಲ್ಪಿ ಜಕಣಾಚಾರಿ ಮುಖ್ಯ ವೇದಿಕೆಗೆ ಸಚಿವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್
ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತುಮಕೂರು ವಿವಿಯ ಕುಲಪತಿ
ಪ್ರೊ.ಎಂ. ವೆಂಕಟೇಶ್ವರಲು, ಮುಜರಾಯಿ ತಹಶೀಲ್ದಾರ್ ಸವಿತ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ತ್ಯಾಗರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.